

ಮದ್ದೂರು: ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ಕಾರಿ ಸಾರಿಗೆ ಬಸ್ ನಿಲ್ದಾಣದ ಎದುರು ಚರಂಡಿ ನೀರು ಹೆದ್ದಾರಿಗೆ ಹರಿಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಪಕ್ಷದ ರಾಜ್ಯ ಉಪಾಧ್ಯಕ್ಷ ನಿಂಗೇಗೌಡ ಮಾತನಾಡಿ, ಒಳಚರಂಡಿ ಸೇರಿದಂತೆ ಚರಂಡಿಗಳ ಮಲಿನ ನೀರು ಹೆದ್ದಾರಿಗೆ ಹರಿಯುತ್ತಿದೆ. ಇದರಿಂದ ನಿಲ್ದಾಣಕ್ಕೆ ಪ್ರತಿನಿತ್ಯ ಬರುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಮೂಗು ಮುಚ್ಚಿಕ್ಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆದ್ದಾರಿ ವಿಸ್ತರಣೆ ಕಾಮಗಾರಿ ವೇಳೆ ಸರ್ವೀಸ್ ರಸ್ತೆಯ ಬಳಿ ಈ ಭಾಗದಲ್ಲಿ ಚರಂಡಿ ಕಾಮಗಾರಿಯನ್ನು ಅಪೂರ್ಣಗೊಳಿಸಿರುವುದೆ ಈ ಅವ್ಯವಸ್ಥೆಗೆ ಕಾರಣವಾಗಿದೆ. ಹೆದ್ದಾರಿಯಲ್ಲಿ ಒಳಚರಂಡಿ ಸೇರಿದಂತೆ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೆಆರ್‌ಎಸ್ ಪಕ್ಷದ ಮುಖಂಡರಾದ ರಾಜು, ರಮೇಶ್‌ಗೌಡ, ಮಲ್ಲೇಶ್, ಪ್ರಮೋದ್, ಮಹದೇವು, ನಾಗರಾಜು, ಸುಮಂತ್, ಚಿಕ್ಕಣ್ಣ, ರವೀಂದ್ರ ಇದ್ದರು.