

ಮಂಡ್ಯ: ಮತದಾರರಿಗೆ ಆಮಿಷ ಒಡ್ಡುತ್ತಿರುವ ಕ್ರಿಮಿನಲ್ ನಡವಳಿಕೆಯ ರಾಜಕಾರಣಿಗಳಿಗೆ ಕಡಿವಾಣ ಹಾಕುವ ಮತ್ತು ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳನ್ನು ಚುನಾವಣಾ ಆಯೋಗಕ್ಕೆ ವರದಿ ಮಾಡುವಂತೆ ನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯ ವಿಧಾನಸಭಾ ಚುನಾವಣೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಭ್ರಷ್ಟ ರಾಜಕಾರಣಿಗಳು ತಮ್ಮ ತಮ್ಮ ಕ್ಷೇತ್ರದ ಮತದಾರರಿಗೆ ಕುಕ್ಕರ್, ಸೀರೆ, ತಟ್ಟೆ, ಲೋಟ, ಬೆಳ್ಳಿ ವಿಗ್ರಹ, ಸ್ಪೋರ್ಟ್ಸ್ ಕಿಟ್ ಇತ್ಯಾದಿ ಉಡುಗೊರೆಗಳನ್ನು ವಿತರಿಸುತ್ತಿದ್ದಾರೆ. ತೀರ್ಥ ಕ್ಷೇತ್ರಗಳ ಪ್ರವಾಸಗಳನ್ನು ಆಯೋಜಿಸುತ್ತಿದ್ದಾರೆ. ಇದು ಕ್ರಿಮಿನಲ್ ಕೃತ್ಯ ಎಂದು ದೂರಿದರು.
ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರಿಗೆ, ಜಿಲ್ಲೆಯಲ್ಲಿ ವರದಿಯಾಗುತ್ತಿರುವ ಭ್ರಷ್ಟ ರಾಜಕಾರಣಿಗಳು ಮತದಾರರಿಗೆ ಆಮಿಷ ಒಡುತ್ತಿರುವ ಕಾನೂನುಬಾಹಿರ ಪ್ರಕರಣಗಳನ್ನು ಕಾನೂನುಗಳ ಅಡಿಯಲ್ಲಿ ಮಟ್ಟ ಹಾಕುವ ಕೆಲಸವನ್ನು ಜಿಲ್ಲಾಧಿಕಾರಿಗಳಾಗಿ ತಾವು ಮಾಡಬೇಕು. ಆ ಪ್ರಕರಣಗಳನ್ನು ಚುನಾವಣಾ ಆಯೋಗದ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.
ರಾಜ್ಯ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ, ಜಿಲ್ಲಾಧ್ಯಕ್ಷ ರಮೇಶ್‌ಗೌಡ, ಸದಸ್ಯರಾದ ಸಿರಾಜ್ ಅಹ್ಮದ್, ರಘ ಜಾಣಗೆರೆ, ಕೆ.ಜೆ.ರಮೇಶ್, ಸಿದ್ದಲಿಂಗಯ್ಯ, ಮಂಜುನಾಥ್ ಇತರರಿದ್ದರು.