ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

udp-11-lakshmi mutt
Published on

ಉಡುಪಿ: ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದೆ. ಸರ್ಕಾರದ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸಿಕೊಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತು ಮುಖ್ಯ ಮಂತ್ರಿಗಳು ಹಾಗೂ ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ ಕ್ರಮಕೈಗೊಳ್ಳುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಸ್ಥಗಿತಗೊಂಡಿರುವ ನರ್ಮ್ ಬಸ್ ಗಳ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಸಹ ಬಸ್ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಗೃಹಲಕ್ಷ್ಮೀ ಯೋಜನೆ ರೂಪುರೇಷೆ ಸಿದ್ದಗೊಳ್ಳುತ್ತಿದೆ. ಇಲಾಖೆಯಿಂದ ಯಾವ ರೀತಿಯಲ್ಲಿ ಕಾರ್ಯಕ್ರಮ ಮಾಡಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಯುತ್ತಿದ್ದು, ಇನ್ನೆರಡು ದಿನದಲ್ಲಿ ಸ್ಪಷ್ಟ ಚಿತ್ರಣ ಲಭ್ಯವಾಗಲಿದ್ದು, ಗಜೆಟ್ ನೋಟಿಫಿಕೇಶನ್ ಹೊರಡಿಸಲಾಗುವುದು. ಆ. 15 ರಂದು ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಲು ತಿರ್ಮಾನಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಪಕ್ಷ ಸಂಘಟನೆ
ರಾಜಕಾರಣದಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲುವುದೇ ಜಾಣತನ. ವಿಪಕ್ಷಗಳ ಶಾಸಕರ ಸಹಕಾರವನ್ನು ಕೋರಿದ್ದೇನೆ. ಉಡುಪಿ ಜಿಲ್ಲೆಯನ್ನು ಪ್ರಗತಿಯತ್ತ ತೆಗೆದುಕೊಂಡು ಹೋಗಲು ಬಯಸಿದ್ದು, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರ ಸರ್ಕಾರಕ್ಕೆ ಒಳ್ಳೆಯ ಹೆಸರು ತರಲು ಬಂದಿದ್ದೇನೆ. ನನ್ನ ಮೇಲೆ ಭರವಸೆ ಇಟ್ಟು ಉಡುಪಿ ಜಿಲ್ಲೆಗೆ ಉಸ್ತುವಾರಿ ಮಾಡಿದ್ದಾರೆ. ಅಭಿವೃದ್ಧಿಯ ಬಗ್ಗೆ ನನ್ನ ಗಮನವಿರುತ್ತದೆ. ಜಿಲ್ಲಾ ಕಾಂಗ್ರೆಸ್ ಸಂಘಟಿಸುವ ಜವಾಬ್ದಾರಿಯೂ ಇದ್ದು, ಸಂಘಟನೆಯಲ್ಲಿ ಚುರುಕು ಬರುವಂತೆ ಕೆಲಸ ಮಾಡುತ್ತೇನೆ ಎಂದವರು ಹೇಳಿದರು.

ತಾಲೂಕುವಾರು ಭೇಟಿ
ಬೆಳಗಾವಿ, ಉಡುಪಿ , ಬೆಂಗಳೂರು ಸೇರಿದಂತೆ ಇಡೀ ರಾಜ್ಯಾದ್ಯಂತ ಕ್ಷೇತ್ರ ಸಂಚಾರ ಮಾಡಬೇಕು. ತಿಂಗಳಿಗೆ ಎರಡು ಬಾರಿ ಜಿಲ್ಲೆಗೆ ಬರಬೇಕು ಎಂದು ನಿರ್ಧರಿಸಿದ್ದೇನೆ. ಕನಿಷ್ಠ ಒಂದು ಬಾರಿಯಾದರೂ ಬಂದು ತಾಲೂಕು ಮಟ್ಟದವರೆಗೂ ಹೋಗಿ ಪ್ರಗತಿ ಪರಿಶೀಲನೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಪಂಚಾಯಿತಿ ಮಟ್ಟಕ್ಕೂ ತಿರುಗಾಟ ಮಾಡುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net