

ಕೂಡ್ಲಿಗಿ: ಅವಕಾಶ ಮಾಡಿಕೊಟ್ಟರೆ ಪಕ್ಷ ಸಂಘಟನೆ ಮಾಡಲು ನಾನು ಎಲ್ಲ ರೀತಿಯಿಂದಲೂ ಸಮರ್ಥನಿದ್ದೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಲ್ಲಿನ ಒಡೆದ ಮನಸ್ಸುಗಳನ್ನು ಒಂದುಗೂಡಿಸಿ ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ. ಇದಕ್ಕಾಗಿ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲು ಮುಂದಾಗಿದ್ದೇನೆ. ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡುತ್ತೇನೆ. ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುವೆ ಎಂದರು.
ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತಿದ್ದು, ಅವರಿಗೆ ಈಗಾಗಲೇ ಎರಡು ಬಾರಿ ನೋಟಿಸ್ ನೀಡಲಾಗಿದ್ದು, ಪಕ್ಷದ ರಾಷ್ಟ್ರೀಯ ನಾಯಕರು ಈ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥರು ಎಂದು ನಾನು ಹೇಳುತ್ತಿಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಆ ಪಕ್ಷದ ನಾಯಕರು ಹಾಗೂ ರಾಜ್ಯದ ಜನರೂ ಬೇಸತ್ತಿದ್ದಾರೆ. ಈ ಅವಕಾಶವನ್ನು ಬಿಜೆಪಿ ಬಳಸಿಕೊಳ್ಳಬೇಕಾಗಿದೆ. ಇದಕ್ಕಾಗಿ ನಾವು ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಹೋಗಬೇಕಾಗಿದೆ. ಎಲ್ಲರನ್ನೂ ಒಂದುಗೂಡಿಸುವ ಜವಾಬ್ದಾರಿ ನನಗೆ ವಹಿಸಲಿ. ಸನಾತನ ಹಿಂದು ಧರ್ಮದ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಶ್ರೀರಾಮುಲು ತಿಳಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗರಾಜ, ಪ್ರಧಾನ ಕಾರ್ಯದರ್ಶಿ ಪಿ.ಮಂಜುನಾಥ ನಾಯಕ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಸಾಣೆಹಳ್ಳಿ ಹನುಮಂತಪ್ಪ, ಮುಖಂಡ ಬಿ.ಭೀಮೇಶ್ ಇದ್ದರು.