ನ.5ರಂದು ಕುಡುಬಿ ಸಂಘದಿಂದ ಹಕ್ಕೊತ್ತಾಯ ಜಾಥಾ

kudubi-holi-udupi
Published on


ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು 70000 ಜನಸಂಖ್ಯೆ ಹೊಂದಿರುವ ಕುಡುಬಿ ಜನಾಂಗವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸ ಬೇಕೆಂದು ದ.ಕ. ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘ ಆಗ್ರಹಿಸಿದೆ.
ಸ್ವಾತಂತ್ರೃ ಪೂರ್ವದಲ್ಲಿ ಬ್ರಿಟಿಷ್ ಸರ್ಕಾರ ಹಾಗೂ ಬಳಿಕ ಭಾರತ ಸರ್ಕಾರದಿಂದ ಪರಿಶಿಷ್ಟ ಜಾತಿ ಎಂದು ಗುರುತಿಸಲ್ಪಟ್ಟಿದ್ದ ಕುಡುಬಿ ಜನಾಂಗದ ಹಕ್ಕನ್ನು ಮರಳಿ ನೀಡಬೇಕು ಎಂದು ಒತ್ತಾಯಿಸಿ ನ.5ರಂದು ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನದ ಸೌಧದವರೆಗೆ ಹಕ್ಕೊತ್ತಾಯ ಜಾಥಾ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಕುಡುಬಿ
ಸಮುದಾಯದವರು ತಮ್ಮ ಜಾನಪದ ಕಲೆಯಾದ ಗುಮ್ಮಟೆ, ಕೋಲಾಟ ತಂಡಗಳೊಂದಿಗೆ ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಕೃಷ್ಣ ಕೊಂಪದವು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದ ಕುಡುಬಿ ಸಮುದಾಯ ಸಂವಿಧಾನದತ್ತ ಹಕ್ಕನ್ನು ಕಳೆದ 70 ವರ್ಷಗಳಿಂದ ಕಳೆದುಕೊಂಡಿದೆ. 2007ರಲ್ಲಿ ಧಾರವಾಡದ ಕನ್ನಡ ವಿವಿಯ ಮಾನವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಟಿ.ಟಿ. ಬಸವನಗೌಡ ಅವರನ್ನು ಕುಡುಬಿ ಜನಾಂಗದ ಕುಲ ಶಾಸ್ತ್ರೀಯ ಅಧ್ಯಯನ ನಡೆಸಲು ನೇಮಕಾತಿ ಮಾಡಲಾಗಿತ್ತು. ಅವರು ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಮತ್ತೆ ಸೇರ್ಪಡೆ ಮಾಡಲು ಶಿಫಾರಸು ಮಾಡಿ 2008ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ಇದುವರೆಗೆ ಯಾವುದೇ ಕ್ರಮವಾಗಿಲ್ಲ. ಹಾಗಾಗಿ ನಮ್ಮ ಹಕ್ಕನ್ನು ಮರಳಿ ಒದಗಿಸಬೇಕೆಂಬ ನಿಟ್ಟಿನಲ್ಲಿ ಇದೀಗ ಸಮುದಾಯ ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದೆ ಎಂದು ಅವರು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಶೇಖರ ಗೌಡ ಬಜ್ಪೆ, ಸಂಘಟನಾ ಕಾರ್ಯದರ್ಶಿ ಸುಂದರ ಗೌಡ ಕಡಂದಲೆ, ಉಪಾಧ್ಯಕ್ಷ ಕೊರ್ಗ್ಯ ಗೌಡ, ಕೋಶಾಧಿಕಾರಿ ಎಚ್.ರಾಮಗೌಡ ಹೊಸಗದ್ದೆ , ಸಂಘಟನಾ ಸದಸ್ಯರಾದ ಹೇಮಚಂದ್ರ ಸಿದ್ದಕಟ್ಟೆ , ಉದಯ ಮಂಗಳೂರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net