

ಕುಷ್ಟಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಘೋಷಣೆಗೆ ಮಾತ್ರ ಸೀಮಿತವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಬುಧವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಕ ಭಾಗದ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದ ರಾಜ್ಯ ಸರ್ಕಾರ ಕೇವಲ ಮೂರೂವರೆ ಸಾವಿರ ಕೋಟಿ ರೂ. ನೀಡಿದೆ.
ಸಮರ್ಪಕ ಅನುದಾನ ನೀಡಿ ಸರ್ವಾಂಗೀಣ ಅಭಿವೃದ್ಧಿಯಾದಾಗ ಮಾತ್ರ ಈ ಭಾಗದ ಸ್ವಾತಂತ್ರೃಕ್ಕೆ ಬೆಲೆ ಸಿಕ್ಕಂತಾಗುತ್ತದೆ. ಸ್ವಾತಂತ್ರೃಕ್ಕಾಗಿ ಪ್ರಾಣತ್ಯಾಗ ಮಾಡಿದವರ ಸ್ಮರಣೆ ಮಾಡುವುದು ಎಲ್ಲರ ಕರ್ತವ್ಯ ಎಂದರು.
ತಹಸೀಲ್ದಾರ್ ಅಶೋಕ ಶಿಗ್ಗಾವಿ, ತಾಪಂ ಇಒ ಪಂಪಾಪತಿ ಹಿರೇಮಠ, ಪುರಸಭೆ ಅಧ್ಯಕ್ಷ ಮಹಾಂತೇಶ ಕಾಲಬಾವಿ, ಸದಸ್ಯ ಜೆ.ಜಿ. ಆಚಾರ್, ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ, ಸಿಡಿಪಿಒ ಯಲ್ಲಮ್ಮ ಹಂಡಿ, ರೈತ ಸಂಘದ ಜಿಲ್ಲಾಧ್ಯಕ್ಷ ನಜೀರಸಾಬ ಮೂಲಿಮನಿ, ಸಪ್ರದ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ವಿ.ಡಾಣಿ ಇತರರಿದ್ದರು. ವಿವಿಧ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.