

ಕುಷ್ಟಗಿ: ಕುಷ್ಟಗಿ-ಹುಬ್ಬಳ್ಳಿ ರೈಲು ಸಂಚಾರಕ್ಕೆ ಮೇ10ರಂದು ಚಾಲನೆ ನೀಡಲಾಗುತ್ತಿದೆ ಎಂದು ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗದಗ-ವಾಡಿ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಕುಷ್ಟಗಿ ವರೆಗಿನ ಕಾಮಗಾರಿ ಪೂರ್ಣಗೊಂಡಿದೆ. ಹಳಿಗಳ ಪರೀಕ್ಷೆ, ರೈಲಿನ ವೇಗ ಹಾಗೂ ವಿವಿಧ ತಾಂತ್ರಿಕ ಪರೀಕ್ಷೆಗಳು ಪೂರ್ಣಗೊಂಡಿದ್ದು, ರೈಲ್ವೆ ಸಚಿವ ವಿ.ಸೋಮಣ್ಣ ಮೇ10ರಂದು ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದ್ದಾರೆ.
ಗದಗ-ವಾಡಿ ರೈಲು ಮಾರ್ಗ ಸಂಪರ್ಕದ ಜತೆಗೆ ಕೃಷಿ ಉತ್ಪನ್ನ ಹಾಗೂ ದಾಸ್ತಾನು ಸಾಗಾಣೆಗೂ ಅನುಕೂಲವಾಗಲಿದೆ. ಕಾರ್ಯಕ್ರಮದಲ್ಲಿ ಕುಷ್ಟಗಿ-ನರಗುಂದ-ಘಟಪ್ರಭಾ ಹೊಸ ಮಾರ್ಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ಭಾಗದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಿದೆ. ಜಾತಿಗಣತಿ ಬಗ್ಗೆ ಕಾಂಗ್ರೆಸ್ ನಾಯಕರುಗಳಲ್ಲಿಯೇ ಗೊಂದಲವಿದೆ. ಜಾತಿಗಣತಿ ಸಮಂಜಸವಲ್ಲ. ಹಗರಣಗಳಲ್ಲಿ ಸಿಲುಕಿಕೊಂಡು ರಾಜ್ಯದ ಜನರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸುತ್ತಿರುವ ರಾಜ್ಯ ಸರ್ಕಾರ ತನ್ನ ಹುಳುಕು ಮುಚ್ಚಿಕೊಳ್ಳಲು ಜಾತಿ ಗಣತಿಯಂತಹ ವಿವಾದ ಸೃಷ್ಟಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿಯೂ ಏ.22ರಂದು ನಡೆಯಲಿದೆ ಎಂದರು.