

ಕುಷ್ಟಗಿ: ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.
ತಾಲೂಕಿನ ಟೆಂಗುಂಟಿ ಗ್ರಾಮದ ಸ.ಹಿ.ಪ್ರಾ. ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸರ್ಕಾರ ಹಲವು ಯೋಜನೆ ಜಾರಿ ಮಾಡಿ ಅನುಷ್ಠಾನಗೊಳಿಸುತ್ತಿದೆ. ತಾಲೂಕಿನ ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಇದರಿಂದ ಮಕ್ಕಳ ಕಲಿಕೆಗೆ ಹಿನ್ನಡೆಯಾಗುತ್ತಿದೆ. ಅತಿಥಿ ಶಿಕ್ಷಕರಿಂದ ಸರಿದೂಗಿಸುವುದು ತಾತ್ಕಾಲಿಕ ಪರಿಹಾರವಾಗಿದೆ. ಕಾಯಂ ಶಿಕ್ಷಕರ ನೇಮಕಾತಿ ಸಂಬಂಧ ಶಿಕ್ಷಣ ಸಚಿವರ ಗಮನಕ್ಕೆ ತರಲಾಗಿದೆ. ಗ್ಯಾರಂಟಿ ಯೋಜನೆಗಳ ಬದಲು ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.
ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವ ಸಂಬಂಧ ಸರ್ಕಾರದ ಗಮನ ಸೆಳೆಯುವಂತೆ ಗ್ರಾಮಸ್ಥರು ಶಾಸಕ ದೊಡ್ಡನಗೌಡ ಪಾಟೀಲ್‌ಗೆ ಮನವಿ ಸಲ್ಲಿಸಿದರು.
ಎಸ್ಡಿಎಂಸಿ ಮಾಜಿ ಅಧ್ಯಕ್ಷೆ ಬಾಳಮ್ಮ ಪೊಲೀಸ್ ಪಾಟೀಲ್, ಪ್ರಮುಖರಾದ ಗ್ಯಾನಪ್ಪಯ್ಯ, ಬಾಗಪ್ಪ ತಳವಾರ್, ಗೌಡಪ್ಪಗೌಡ ಪೊಪಾ, ಹನುಮಂತಪ್ಪ ಅಂಗಡಿ, ಮಲ್ಲಪ್ಪ ಮೇಟಿ, ಶರಣಪ್ಪ ಹೊಸೂರು, ಮುಖ್ಯಶಿಕ್ಷಕ ಶಿವಾನಂದ ಧರೆಗೊಂಡ, ಶಿಕ್ಷಕ ಮಂಜುನಾಥ ಲಕ್ಷ್ಮೇಶ್ವರ ಇತರರಿದ್ದರು.