ಎಲ್ಲ ವರ್ಗದ ಹಿತ ಕಾಯುವುದು ಬಿಜೆಪಿ ಸರ್ಕಾರ: ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅನಿಸಿಕೆ

28052022 Kustagi Bjp meeting
Published on

ಕುಷ್ಟಗಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಜಾರಿಗೊಳಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಹೇಳಿದರು.

ಪಟ್ಟಣದ ದುರ್ಗಾ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು. ಬಡವರ ಕಲ್ಯಾಣಕ್ಕಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿರುವ ಸರ್ಕಾರ, ಎಲ್ಲ ಜಾತಿ, ಧರ್ಮಗಳನ್ನು ಸಮಾನವಾಗಿ ಕಾಣುತ್ತ ಬಂದಿದೆ. ದೇಶದ ಭದ್ರತೆ ದೃಷ್ಟಿಯಿಂದಲೂ ದಿಟ್ಟ ನಿರ್ಧಾರ ಕೈಗೊಳ್ಳುವ ಎದೆಗಾರಿಕೆ ಪ್ರಧಾನಿಗೆ ಇದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತ ಇಡೀ ವಿಶ್ವದ ಗಮನ ಸೆಳೆಯುವಂತಾಗಿದೆ ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಮಾತನಾಡಿ, ಬಿಜೆಪಿ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡುತ್ತ ಬಂದಿದೆ. ದಲಿತ ಸಮುದಾಯ ಹಾಗೂ ಮಹಿಳೆಯರಿಗೂ ಸೂಕ್ತ ಸ್ಥಾನಮಾನ ನೀಡಿದ ಹೆಗ್ಗಳಿಕೆ ಪಕ್ಷಕ್ಕಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಹೇಮಲತಾ ನಾಯಕ್ ಹಾಗೂ ಇತರರು ಇದಕ್ಕೆ ಸಾಕ್ಷಿ. ಇಡೀ ದೇಶವೇ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿದೆ ಎಂದರು. ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರು, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ನೂರ್ ಬಾಷಾ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಅಧ್ಯಕ್ಷ ಅಮೀನುದ್ದೀನ್ ಮುಲ್ಲಾ, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ ಯಾದವ್, ಪ್ರಮುಖ ಈರಣ್ಣ ಸೊಬರದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net