

ಮಂಡ್ಯ: ಅಸೋಷಿಯೇಷನ್ ಆಫ್ ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 268 ಎಸ್ ಹಾಗೂ ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್‌ನಿಂದ ನಿತ್ಯ ಸಚಿವ ಕೆ.ವಿ.ಶಂಕರಗೌಡ ಹೆಸರಿನಲ್ಲಿ ಕೊಡಮಾಡುವ ರಾಜ್ಯಮಟ್ಟದ ಶಿಕ್ಷಣ ಪ್ರಶಸ್ತಿಗೆ ರಾಮನಗರ ಜಿಲ್ಲೆ ಕನಕಪುರದ ಗ್ರಾಮ ಪ್ರಚಾರಕ ವಿದ್ಯಾಸಂಸ್ಥೆ ಆಯ್ಕೆಯಾಗಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಷಿಯೇಷನ್ ಆಫ್ ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 268 ಎಸ್ ಪ್ರಾಂತಪಾಲರೂ ಆದ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಕೆ.ಟಿ.ಹನುಮಂತು, ಜು.25ರಂದು ನಗರದ ರೈತ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ 25 ಸಾವಿರ ರೂ ನಗದಿನ ಜತೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಚಾರಿಟಬಲ್ ಟ್ರಸ್ಟ್‌ನಿಂದ ಹತ್ತು ವರ್ಷದಿಂದ ಕೆವಿಎಸ್ ಹೆಸರಿನಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿತ್ತು. ಈ ವರ್ಷದಿಂದ ರಾಜ್ಯಮಟ್ಟಕ್ಕೆ ವಿಸ್ತರಣೆ ಮಾಡಲಾಗಿದೆ. ಅಂದು ಮಧ್ಯಾಹ್ನ 3ಗಂಟೆಗೆ ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಗೌರವಾಧ್ಯಕ್ಷರೂ ಅದ ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ ವಹಿಸಲಿದ್ದಾರೆ. ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ.ಅಲ್ಸೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಲಯನ್ಸ್ ಕ್ಲಬ್ಸ್‌ನ ಅಂತಾರಾಷ್ಟ್ರೀಯ ನಿರ್ದೇಶಕ ನಾಗರಾಜು ವಿ.ಭೈರಿ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಆರ್‌ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್, ಅಲಯನ್ಸ್ ಕ್ಲಬ್ಸ್‌ನ 1ನೇ ಉಪ ಪ್ರಾಂತಪಾಲ ಎಚ್.ಮಾದೇಗೌಡ, 2ನೇ ಉಪ ಪ್ರಾಂತಪಾಲ ಕೆ.ಆರ್.ಶಶಿಧರ್ ಈಚಗೆರೆ, ಸಂಪುಟ ಕಾರ್ಯದರ್ಶಿ ಕೆ.ಎಸ್.ಚಂದ್ರಶೇಖರ್, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷ ಪ್ರೊ.ಡೇವಿಡ್ ಪಾಲ್ಗೊಳ್ಳಲಿದ್ದಾರೆಂದು ವಿವರಿಸಿದರು.
ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಕಾರಸವಾಡಿ ಮಹದೇವು, ಪ್ರೊ.ಡೇವಿಡ್, ನಿರಂಜನ್, ಮಂಜುನಾಥ್, ರತ್ನಮ್ಮ ಇದ್ದರು.