

ಮಂಡ್ಯ: ಕೆಲಸ ಖಾಯಂಗೊಳಿಸುವುದರ ಜತೆಗೆ ಕೆಲಸಕ್ಕೆ ತಕ್ಕ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ಸಾಗಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಬಂಡವಾಳಶಾಹಿ ಪರ ರೂಪಿಸಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಇಂದಿನ ಬೆಲೆಗೆ ಅನುಗುಣವಾಗಿ ಎಲ್ಲ ಸಂಘಟಿತ, ಅಸಂಘಟಿತ, ಗುತ್ತಿಗೆ ಕಾರ್ಮಿಕರು ಮತ್ತು ಸ್ಕೀಂ ನೌಕರರಿಗೂ ರಾಷ್ಟ್ರವ್ಯಾಪ್ತಿ 26 ಸಾವಿರ ರೂ ಹಾಗೂ ರಾಜ್ಯವ್ಯಾಪ್ತಿ 36 ಸಾವಿರ ರೂ ಕನಿಷ್ಟ ವೇತನ ನಿಗದಿಪಡಿಸಬೇಕು. ಗುತ್ತಿಗೆ, ಹೊರಗುತ್ತಿಗೆ, ನಿಗದಿತ ಅವಧಿಯ ಉದ್ಯೋಗ, ಅಪ್ರೆಂಟಿಸ್, ಟ್ರೈನಿ, ನ್ಯಾಪ್ಸ್ ಮುಂತಾದ ಹೆಸರಿನಲ್ಲಿ ಕಾರ್ಮಿಕರ ನೇಮಕ ನಿಲ್ಲಿಸಬೇಕು. ಗುತ್ತಿಗೆ ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ತಕ್ಷಣ ಜಾರಿ ಮಾಡಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ವಿದ್ಯುತ್ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು. ಸಮಗ್ರ ಸಾಲ ಮನ್ನಾ ಮತ್ತು ಬೆಳೆ ವಿಮೆ ಯೋಜನೆ ಜಾರಿಗೆ ತರಬೇಕು. ಸಂಯುಕ್ತ ಕಿಸಾನ್ ಮೋರ್ಚಾಗೆ ನೀಡಿದ ಲಿಖಿತ ಭರವಸೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಸೇರಿದಂತೆ 27 ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಂ.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಶಿವಮಲ್ಲು, ಜಯಶೀಲಾ, ಪ್ರಣೀತಾ, ಶಶಿಕಲಾ ಇತರರಿದ್ದರು.