ಅಮ್ಯೂಸ್‌ಮೆಂಟ್ ಪಾರ್ಕಿಗೆ ಭೂಮಿ ಹುಡುಕಾಟ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಭೇಟಿ, ವಿಜಯವಾಣಿ ವರದಿಗೆ ಸ್ಪಂದನೆ

23 dpt torism ada heggudakke beti
Published on

ಬೆಂ. ಗ್ರಾಮಾಂತರ/ದಾಬಸ್‌ಪೇಟೆ: ಗ್ರಾಮಾಂತರ ಜಿಲ್ಲೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣದ ಚಿಂತನೆ ವೇಗ ಪಡೆಯತೊಡಗಿದೆ.

ಜಿಲ್ಲೆಗೆ ಪ್ರವಾಸಿಗರನ್ನು ಸೆಳೆಯಲು ರಾಮನಗರ ಜಿಲ್ಲೆ ಬಿಡದಿ ಸಮೀಪದ ವಂಡರ್ ಲಾ ಮಾದರಿಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣದ ಕನಸಿಗೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯವಿರುವ ಜಮೀನು ಹುಡುಕಾಟಕ್ಕೆ ಮುಂದಾಗಿರುವ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ನೆಲಮಂಗಲ ತಾಲೂಕು ಸೋಂಪುರ ಹೋಬಳಿಯ ನರಸೀಪುರ ಗ್ರಾಪಂ ವ್ಯಾಪ್ತಿಯ ಹೆಗ್ಗುಂದ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಟ್ಟದ ಸಾಲು: ನರಸೀಪುರ ಗ್ರಾಪಂ ವ್ಯಾಪ್ತಿಯಲ್ಲಿ ಬೆಟ್ಟದ ಸಾಲುಗಳಿದ್ದು, ಪಾರ್ಕ್ ನಿರ್ಮಾಣಕ್ಕೆ ಜಾಗ ಪ್ರಶಸ್ತವಾಗಿದೆ ಎನ್ನಲಾಗಿದೆ. ಈ ಭಾಗದಲ್ಲಿ ಸುಮಾರು 75 ಎಕರೆ ಗೋಮಾಳವಿದ್ದು, ಪ್ರವಾಸಿ ತಾಣವಾಗಿ ರೂಪಿಸಲು ಪರಿಶೀಲನೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾಸಿ ತಾಣಗಳ ಪಟ್ಟಿ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜನ ಮತ್ತು ಪ್ರವಾಸಿಗರನ್ನು ಸೆಳೆಯಲು ಪ್ರವಾಸಿ ತಾಣಗಳ ಪಟ್ಟಿ ಮಾಡಿ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲು ಸಚಿವ ಸಿ.ಟಿ.ರವಿ ನಿರ್ದೇಶನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಾರ್ಕ್ ನಿರ್ಮಾಣಕ್ಕೆ ಪರಿಶೀಲಿಸುತ್ತಿದ್ದೇವೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಗೌರಿ ತಿಳಿಸಿದರು. ಜಿಲ್ಲೆಯ ಪ್ರವಾಸೋದ್ಯಮ ತಾಣಗಳನ್ನು ಮತ್ತೊಮ್ಮೆ ಗುರುತಿಸಬೇಕು, ರಸ್ತೆ ಸಂಪರ್ಕದ ಮಾಹಿತಿ ಸಂಗ್ರಹಿಸಬೇಕು, ಪ್ರವಾಸಿ ತಾಣಗಳ ಪಟ್ಟಿಯಿಂದ ಬಿಟ್ಟು ಹೋದ ತಾಣಗಳನ್ನು ಪಟ್ಟಿ ಮಾಡಬೇಕು, ಜತೆಗೆ ಪ್ರದೇಶದ ಸಾಂಸ್ಕೃತಿಕ ಚಿತ್ರಣದ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಚಿವರು ಸೂಚಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದರು.

ಪ್ರವಾಸೋದ್ಯಮ ಇಲಾಖೆ ಅಧಿಕಾರಿ, ರತನ್, ಸಮಾಜ ಸೇವಕ ಎಚ್.ಬಿ.ನಾಗಭೂಷಣ್, ಗ್ರಾಮಸ್ಥರಾದ ನಾಗೇಶ್, ರಘುವೀರ್, ವೆಂಕಟರಾಮು, ರಾಮಚಂದ್ರಪ್ಪ ಇದ್ದರು.

ವಿಜಯವಾಣಿ ವರದಿ ಪ್ರಸ್ತಾಪ: ಜಿಲ್ಲೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣದ ಚಿಂತನೆ ಬಗ್ಗೆ ವಿಜಯವಾಣಿ ಪತ್ರಿಕೆಯಲ್ಲಿ ಸೆ.19ರಂದು ‘ಜಿಲ್ಲೆಗೆ ಅಮ್ಯೂಸ್‌ಮೆಂಟ್ ಪಾರ್ಕ್’ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು. ಈ ವರದಿ ಗಮನಿಸಿದ ಜಿಲ್ಲಾಧಿಕಾರಿಗಳು ಯೋಜನೆ ಸಾಕಾರಕ್ಕೆ ಭೂಮಿ ಹುಡುಕುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿನೂತನ ಯೋಜನೆಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹಸಿರು ನಿಶಾನೆ ತೋರಿಸಿರುವುದರಿಂದ ಪಾರ್ಕ್ ನಿರ್ಮಾಣದ ಕನಸು ಕನಸಾಗುವ ದಿನ ದೂರವಿಲ್ಲ ಎಂಬ ಭರವಸೆ ವ್ಯಕ್ತವಾಗಿದೆ.

ಪ್ರವಾಸೋದ್ಯಮ ಚಟುವಟಿಕೆ ಉತ್ತೇಜನಕ್ಕೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರವಿದೆ. ಜಿಲ್ಲೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ಮಾದರಿಯಲ್ಲಿ ಪ್ರವಾಸಿ ತಾಣ ರೂಪಿಸಲು ಚಿಂತನೆ ನಡೆದಿದ್ದು, ಶೀಘ್ರದಲ್ಲೇ ಸಾಕಾರಗೊಳ್ಳಲಿದೆ. ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ ಇದೊಂದು ದೊಡ್ಡ ಯೋಜನೆಯಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ರೂಪಿಸಬಹುದು. ಇದಕ್ಕಾಗಿ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಲಾಗುವುದು ಆಸಕ್ತರು ಸಂಪರ್ಕಿಸಬಹುದು. ಸರ್ಕಾರದಿಂದ ಭೂಮಿ ದೊರೆಯಲಿದೆ. ಇದಕ್ಕಾಗಿ ಸೂಕ್ತ ಜಾಗದ ಹುಡುಕಾಟ ನಡೆದಿದೆ. ಮಂಗಳಗೌರಿ, ಜಿಲ್ಲಾ ಪ್ರವಾಸೋದ್ಯಮ ಸಹಾಯಕ ನಿರ್ದೇಶಕಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net