

ಬೇಲೂರು : ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಉಚಿತ ಲ್ಯಾಪ್‌ಟಾಪ್ ವಿತರಿಸಿ ಪ್ರೋತ್ಸಾಹಿಸುತ್ತಿದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ಹೇಳಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರ್ಕಾರ ಭವಿಷ್ಯದ ದೃಷ್ಟಿಯಿಂದ ಲ್ಯಾಪ್‌ಟಾಪ್ ನೀಡುತ್ತಿದೆ. ಈ ಮೂಲಕ ಉನ್ನತ ಶಿಕ್ಷಣ ಪಡೆದು ಸಾಧನೆ ಮಾಡಬೇಕು. ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಗಳು ಸನ್ನಿಹಿತವಾಗುತ್ತಿದೆ. ಮಕ್ಕಳು ಚೆನ್ನಾಗಿ ಓದಿಕೊಳ್ಳಬೇಕು. ಲ್ಯಾಪ್‌ಟ್ಯಾಪ್ ಬಡ ವರ್ಗದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗಲಿದೆ. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಅಧಿಕಾರಿಗಳು ಜನರ ಕಷ್ಟಗಳಿಗೆ ಸ್ಪಂದಿಸಬೇಕು. ಕಾರ್ಮಿಕರು ಕಷ್ಟಪಟ್ಟು ಜೀವನ ಮಾಡುತ್ತಾರೆ. ಅವರ ಮಕ್ಕಳು ಓದಿ ವಿದ್ಯಾವಂತರಾಗಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಬೇಕು. ಕಾರ್ಮಿಕರಿಗೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದರು. ತಾಪಂ ಇಒ ಸತೀಶ್, ಕಾರ್ಮಿಕ ಇಲಾಖೆ ಅಧಿಕಾರಿ ಯಮುನಾ, ತಾಲೂಕು ಅಧಿಕಾರಿ ವಿಜಯ್ ಕುಮಾರ್, ಪುರಸಭೆ ಅಧ್ಯಕ್ಷೆ ಮೀನಾಕ್ಷಿ ವೆಂಕಟೇಶ್ ಇತರರಿದ್ದರು.