

ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಯೋಧ, ಅವರನ್ನು ವರುಣದಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಎಐಸಿಸಿ ವಕ್ತಾರ ಅನ್ಷುಲ್ ಅವಿಜಿತ ಕರೆ ನೀಡಿದರು.
ನಗರದ ಇಂದಿರಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ವರುಣ ವಿಧಾನಸಭಾ ಕ್ಷೇತ್ರದ ಎಸ್‌ಟಿ ಸಮುದಾಯದ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಸೇರಿದಂತೆ ಎಲ್ಲ ವರ್ಗಗಳ ಅಭಿವೃದ್ಧಿಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಎಲ್ಲ ವರ್ಗದ ವಿರೋಧಿಯಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನವನ್ನೂ ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ. ಬಿಜೆಪಿಯಿಂದ ಸಾಮಾಜಿಕ ನ್ಯಾಯವನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯ ದೊರೆಯಬೇಕಾದರೆ ಕಾಂಗ್ರೆಸ್‌ಅನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳು ಹಾಗೂ ಕಾಂಗ್ರೆಸ್ ಚುನಾವಣೆಯಲ್ಲಿ ನೀಡಿರುವ ಭರವಸೆಗಳನ್ನು ಮತದಾರರಿಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಆ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಬಸವರಾಜ್, ಕೆಪಿಸಿಸಿ ಒಬಿಸಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪದ್ಮನಾಭ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಹಾಗೂ ಇತರರು ಇದ್ದರು.