

ಮಡಿಕೇರಿ: ಶಕ್ತಿ ಯೋಜನೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಹಿಳೆಯರಿಗೆ ಸಿಹಿ ವಿತರಿಸಿ ಉಚಿತ ಬಸ್ಸು ಪ್ರಯಾಣಕ್ಕೆ ಚಾಲನೆ ನೀಡಿದರು.
ಬಸ್ಸು ನಗರದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಮೂಲಕ, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮೂಲಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ವರೆಗೆ ಸಾಗಿ ಮತ್ತೆ ಬಸ್ಸು ನಿಲ್ದಾಣ ತಲುಪಿತು. ಶಕ್ತಿ ಯೋಜನೆ ಚಾಲನೆ ಸಂದರ್ಭದಲ್ಲಿ ಮಹಿಳೆಯರಲ್ಲಿ ಒಂದು ರೀತಿ ಸಂಭ್ರಮ, ಸಡಗರದ ವಾತಾವರಣ ನಿರ್ಮಾಣವಾಗಿತ್ತು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಜಿಲ್ಲೆಯಲ್ಲಿ ಮುಂಗಾರು ಎದುರಿಸಲು ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಕಾಡಾನೆ ಹಾವಳಿ ನಿಯಂತ್ರಣ ಸೇರಿದಂತೆ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ಬಜೆಟ್ ಆರಂಭಕ್ಕೂ ಮೊದಲು ಜಿಲ್ಲೆಗೆ ಆಗಮಿಸಿ ಕೆಡಿಪಿ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು ತಿಳಿಸಿದರು.
ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ, ಮಡಿಕೇರಿ ನಗರಕ್ಕೆ ಕುಡಿಯುವ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಲಾಗಿದೆ ಎಂದರು.