ಕಾರ್ಮಿಕರಿಗೆ ಕಾನೂನು ಅರಿವು ಅಗತ್ಯ

06-GPT-1
Published on

ಗುಂಡ್ಲುಪೇಟೆ: ಪ್ರತಿಯೊಬ್ಬ ಕಾರ್ಮಿಕರು ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವ ಮೂಲಕ ಅಗತ್ಯ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಿರಿಯ ಸಿವಿಲ್ ಜೆಎಂಎಫ್‌ಸಿ ನ್ಯಾಯಾಧೀಶ ಈಶ್ವರ್ ಹೇಳಿದರು.


ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಕಾರ್ಮಿಕ ಕಲ್ಯಾಣ ಇಲಾಖೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯಿಂದ ಅಸಂಘಟಿತ ಕಾರ್ಮಿಕರು ಮತ್ತು ಅಪಾಯಕಾರಿ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆಯೋಜಿಸಿದ್ದ ಒಂದು ದಿನದ ಕಾನೂನು ಅರಿವು ನೆರವು ಮತ್ತು ಸೌಲಭ್ಯಗಳ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿ ಕಾನೂನಿನ ಅರಿವು ತಿಳಿದುಕೊಳ್ಳುವುದು ಮುಖ್ಯ ಭಾರತದ ಸಂವಿಧಾನ ಪ್ರತಿಯೊಬ್ಬ ವ್ಯಕ್ತಿಗೂ ಗೌರವ ತೋರುವ ಮೂಲಕ ನ್ಯಾಯ ದೊರಕಿಸಿಕೊಡುತ್ತದೆ ಎಂದರು.


ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಸವಿತಾ ಮಾತನಾಡಿ, ಮುಖ್ಯವಾಗಿ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಅಪಾಯಕಾರಿ ವಲಯದಲ್ಲೂ ಕೆಲಸ ಮಾಡುವ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದರಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.


ಬಾಲಕಾರ್ಮಿಕ ಯೋಜನಾಧಿಕಾರಿ ಮಹೇಶ್, ಕಾರ್ಮಿಕ ಇಲಾಖೆ ನಿರೀಕ್ಷಕರಾದ ನಾರಾಯಣಮೂರ್ತಿ, ಗಣೇಶ್, ಕಾಳಿಂಗ ಸ್ವಾಮಿ ಸಿದ್ದಾರ್ಥ, ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net