

ಮಂಡ್ಯ: ಜಿಲ್ಲಾ ವಕೀಲರ ಸಂಘದ ವತಿಯಿಂದ ಡಿ.8 ರಿಂದ 10ರವರೆಗೆ ರಾಜ್ಯಮಟ್ಟದ ವಕೀಲರ ಕ್ರೀಡಾಕೂಟ ಆಯೋಜಿಸಲಾಗಿದೆ. ರಾಜ್ಯದ 1,500 ರಿಂದ 2 ಸಾವಿರ ಸ್ಪರ್ಧಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆಂದು ಸಂಘದ ಜಿಲ್ಲಾಧ್ಯಕ್ಷ ಎಂ.ಟಿ.ರಾಜೇಂದ್ರ ತಿಳಿಸಿದರು.
ಕ್ರಿಕೆಟ್, ಬ್ಯಾಡ್ಮಿಂಟನ್ ಮತ್ತು ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ, ಎಲ್ಲ ಸ್ಪರ್ಧಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಸ್ಪರ್ಧಿಗಳು ಮತ್ತು ತಂಡ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ. 8ರಂದು ಬೆಳಗ್ಗೆ 9.30ಕ್ಕೆ ಕ್ರೀಡಾಕೂಟವನ್ನು ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಚ್.ಎಲ್.ವಿಶಾಲರಘು ಉದ್ಘಾಟಿಸುವರು. ಸಂಘದ ಜಿಲ್ಲಾಧ್ಯಕ್ಷ ಎಂಟಿ.ರಾಜೇಂದ್ರ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಜಿ.ರಮಾ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸಂಘದ ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಡಿ.ಎಂ.ಮಹೇಶ್ ಇದ್ದರು.