ದಕ್ಷಿಣ ಕನ್ನಡ ಜಿಲ್ಲೆಗೆ 25 ಅಂಗನವಾಡಿ ಮಂಜೂರು - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

mng-13july-laxmi
Published on


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ 10 ಸರ್ಕಾರಿ ಮೊಂಟೆಸ್ಸರಿಗಳು ಸಹಿತ 25 ಅಂಗನವಾಡಿಗಳನ್ನು ಮಂಜೂರು ಮಾಡಲಾಗುವುದು. ಪ್ರತೀ ಅಂಗನವಾಡಿಗೆ ತಲಾ 20 ಲಕ್ಷ ರೂ.ನೀಡಲಾಗುವುದು. ವ್ಯವಸ್ಥಿತ ರೀತಿಯಲ್ಲಿ ಅಂಗನವಾಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ನಗರದ ಉರ್ವಸ್ಟೋರ್‌ನಲ್ಲಿ ಶನಿವಾರ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ನವೀಕೃತ ಸಾಹಿತ್ಯ ಸದನದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ‘ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಸಕ್ತ ಸಾಲಿನ ರಾಜ್ಯ ಪ್ರಶಸ್ತಿಯನ್ನು ಕರಾವಳಿ ಲೇಖಕಿಯರ ವಾಚಕಿಯರ ಸಂಘಕ್ಕೆ ನೀಡುವುದಾಗಿ ತಿಳಿಸಿದರು.
ಅಂಗನವಾಡಿಗಳನ್ನು ಇನ್ನು ಮೊಂಟೆಸ್ಸರಿ ಎಂದು ಕರೆಯಲಾಗುವುದು. ಎಲ್ಲ ಪೋಷಕರಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಆಕಾಂಕ್ಷೆ ಇರುತ್ತದೆ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಸರ್ಕಾರಿ ಮೊಂಟೆಸ್ಸರಿಗಳಾಗಿ ಪರಿವರ್ತಿಸಲಾಗುವುದು ಎಂದು ಹೆಬ್ಬಾಳ್ಕರ್ ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಮಂಗಳೂರು ನಗರ ವ್ಯಾಪ್ತಿಯಲ್ಲಿ 30 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿವೆ. ಆರು ಕಟ್ಟಡಗಳ ಕಾಮಗಾರಿ ನಡೆಯುತ್ತಿದೆ. ಈ ಬಗ್ಗೆ ಗಮನ ಹರಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಶ್ರೀನಾಥ್ ಎಂ. ಪಿ. , ಹಿರಿಯ ಲೇಖಕಿ ಇಂದಿರಾ ಹಾಲಂಬಿ , ಡಾ.ಸಬಿತಾ ಬನ್ನಾಡಿ, ಎಂಆರ್‌ಪಿಎಲ್ ಅಧಿಕಾರಿ ಮೀನಾಕ್ಷಿ , ಕಾರ್ಪೋರೇಟರ್ ಗಣೇಶ್ ಕುಲಾಲ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷೆ ಜ್ಯೋತಿ ಚೇಳಾರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷೆ ವಿಜಯಲಕ್ಷ್ಮಿ.ಬಿ.ಶೆಟ್ಟಿ, ಕಾರ್ಯದರ್ಶಿ ಸುಜಾತ ಕೊಡ್ಮಾಣ್,
ಜತೆ ಕಾರ್ಯದರ್ಶಿ ಆಕೃತಿ.ಐ.ಎಸ್.ಭಟ್, ಕೋಶಾಧಿಕಾರಿ ಶರ್ಮಿಳಾ ಶೆಟ್ಟಿ ಉಪಸ್ಥಿತರಿದ್ದರು. ಡಾ.ಸುಧಾರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುಳಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net