

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು ಸವಾಲು ಎದುರಿಸಿ ಮುಂದೆ ಬಂದಾಗ ಸಾಧಕರಾಗುತ್ತೇವೆ. ಶಾಲೆ ಎಂಬ ಅರಿವಿನ ಬಾಗಿಲು ತೆರೆದಾಗ ಜ್ಞಾನ ಪಡೆಯಬಹುದು. ಭಾಷಾ ಜ್ಞಾನದೊಂದಿಗೆ ಕಲಿಕೆಯ ಬಗ್ಗೆ ಆಸಕ್ತಿ ವಹಿಸಿದಾಗ ಉನ್ನತ ಗುರಿ ತಲುಪಲು ಸಾಧ್ಯ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ಕಟಪಾಡಿಯಲ್ಲಿ ಶನಿವಾರ ನಡೆದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ಪೂರ್ಣ ಅಂಕ ಗಳಿಸಿದ ಕಾಪು ತಾಲೂಕು ವ್ಯಾಪ್ತಿಯ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಟಪಾಡಿ ತ್ರಿಶಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಹರಿಪ್ರಸಾದ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿದರು. ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿದ್ದರು. ಧೀರಜ್ ಬೆಳ್ಳಾರೆ, ಬಾಲಸುಬ್ರಹ್ಮಣ್ಯಂ, ಶ್ರೀನಿವಾಸ ರಾವ್ ಕಾಪು, ದೀಪಕ್ ಬೀರ, ಮಧುಕರ್ ಎಸ್.ಕಲ್ಯಾ, ಅಬ್ಬಾಸ್ ಸಾಹೇಬ್ ಹೆಜಮಾಡಿ, ಯಶೋದಾ ಎಲ್ಲೂರು, ನರಸಿಂಹಮೂರ್ತಿ ಉಪಸ್ಥಿತರಿದ್ದರು. ಕಾರ್ಯದರ್ಶಿ ನೀಲಾನಂದ ನಾಯ್ಕ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಕೃಷ್ಣಕುಮಾರ್ ರಾವ್ ಮಟ್ಟು ಸ್ಪರ್ಧಾ ವಿಜೇತರನ್ನು ಪರಿಚಯಿಸಿದರು. ಕೋಶಾಧಿಕಾರಿ ವಿದ್ಯಾಧರ ಪುರಾಣಿಕ್ ಕಾರ್ಯಕ್ರಮ ನಿರೂಪಿಸಿದರು.
ಸಾಧಕ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ, ತಾಲೂಕು ವ್ಯಾಪ್ತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಭಾಷಣ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ, ಶೇಕಡ ನೂರು ಫಲಿತಾಂಶ ದಾಖಲಿಸಿದ ಪಲಿಮಾರು ಸ.ಪ.ಪೂ. ಕಾಲೇಜು ಪ್ರಾಂಶುಪಾಲೆ ಗ್ರೆಟ್ಟಾ ಮೊರಾಸ್ ಅವರನ್ನು ಅಭಿನಂದಿಸಲಾಯಿತು.