

ಪಾಂಡವಪುರ: ತಾಲೂಕಿನ ಎಲೆಕೆರೆ ಗ್ರಾಮದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದು ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ಶನಿವಾರ ಸಂಜೆ ಬಿಜೆಪಿ ಸೇರ್ಪಡೆಗೊಂಡರು.
ಕೆಸರಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಡಾ.ಇಂದ್ರೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರಧಾನಿ ನರೇಂದ ಮೋದಿ ಅವರ ಕಾರ್ಯವೈಖರಿ ಮತ್ತು ಬಿಜೆಪಿ ತತ್ವ-ಸಿದ್ಧಾಂತ ಮೆಚ್ಚಿ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಷಯ. ಕೇವಲ ಮೇಲುಕೋಟೆ ಕ್ಷೇತ್ರವಲ್ಲದೆ ಇಡೀ ರಾಜ್ಯದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ. ರಾಷ್ಟ್ರದ ಭದ್ರತೆ, ಆರ್ಥಿಕತೆ ಬೆಳವಣಿಗೆ ಸೇರಿದಂತೆ ಅನೇಕ ವಿಚಾರಗಳಲ್ಲಿ ಪ್ರಧಾನಿ ಮೋದಿ ಅವರು ತೆಗೆದುಕೊಂಡಿರುವ ದೃಢ ನಿರ್ಧಾರಗಳು ಯುವಕರು ಮತ್ತು ವಿವಿಧ ಪಕ್ಷಗಳ ಮುಖಂಡರನ್ನು ಬಿಜೆಪಿಯತ್ತ ಸೆಳೆಯುತ್ತಿದೆ. ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿದಿರುವ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರಭಾವ ಕೂಡ ಅನ್ಯ ಪಕ್ಷದವರನ್ನು ಬಿಜೆಪಿಯತ್ತ ಸೆಳೆಯುತ್ತಿದೆ ಎಂದರು.
ಎಲೆಕೆರೆ ಸತೀಶ್, ಈರೇಗೌಡ, ಅಶೋಕ್, ಚಿಕ್ಕಮರಳಿ ನವೀನ್ ಇತರರು ಇದ್ದರು.