

ವಿಜಯವಾಣಿ ಸುದ್ದಿಜಾಲ ಉಡುಪಿ
ಹಿರಿಯ ನಾಗರಿಕರಿಗೆ ತಮ್ಮ ಹಕ್ಕುಗಳನ್ನು ಕಾನೂನು ಬದ್ಧವಾಗಿ ಚಲಾಯಿಸಲು ಕಾನೂನು ಸೇವೆಗಳ ಪ್ರಾಧಿಕಾರವು ಅಗತ್ಯ ಸಹಕಾರ ನೀಡಲಿದೆ. ಎಲ್ಲ ಹಿರಿಯರು ಅದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಯೋಗೇಶ ಸಲಹೆ ನೀಡಿದರು.
ಉಡುಪಿಯ ಅಜ್ಜರಕಾಡುವಿನಲ್ಲಿರುವ ಹಿರಿಯ ನಾಗರಿಕರ ಕಚೇರಿ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಸಂಘ ಉಡುಪಿ ಆಶ್ರಯದಲ್ಲಿ ಜೂನ್ 24 ರಂದು ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಜಾಗೃತಿ ದಿನದ ನಿಮಿತ್ತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯರು ಜೀವಿಸಿದ ರೀತಿ, ಬದುಕನ್ನು ಅರಿಯಲು, ಸಂಸ್ಕಾರ ಕಲಿಯಲು ಅವರ ಅನುಭವಗಳನ್ನು ಮುಂದಿನ ಪೀಳಿಗೆಗೆ ತಿಳಿಸಲು ಅವರ ಮಾರ್ಗದರ್ಶನ ಅತ್ಯವಶ್ಯ. ಹಿರಿಯ ನಾಗರಿಕರಿಗೆ ಗೌರವ, ಆಶ್ರಯ, ಸುರಕ್ಷತೆ ನೀಡುವುದರೊಂದಿಗೆ ಆತ್ಮಗೌರವದಿಂದ ಸಮಾಜ ಹಾಗೂ ಕುಟುಂಬದ ಕಿರಿಯರು ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನಾ ಮಾತನಾಡಿ, ಹಿರಿಯ ನಾಗರಿಕರಿಗೆ ಇಲಾಖೆಯಿಂದ ಲಭ್ಯವಿರುವ ಸೌಲಭ್ಯ ಕುರಿತು ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಉಪ ಕಾನೂನು ನೆರವು ಅಭಿರಕ್ಷಕ ಶ್ರೀನಿವಾಸ ಉಪಾಧ್ಯ ಬಿ., ಸಹಾಯಕ ಕಾನೂನು ನೆರವು ಅಭಿರಕ್ಷಕಿ ಭಾನುಮತಿ ಎಂ.ಆರ್. ನಾಯರಿ ಹಾಗೂ ಸಹಾಯಕ ಕಾನೂನು ನೆರವು ಅಭಿರಕ್ಷಕಿ ಶ್ವೀನಿ ಜೆಸಿಮಾ ಡಿ'ಸೋಜ ಅವರು ಹಿರಿಯ ನಾಗರಿಕರ ಪಾಲನೆ, ಪೋಷಣೆ ಹಾಗೂ ರಕ್ಷಣಾ ಕಾಯಿದೆಯ ಕುರಿತು ಮಾಹಿತಿ ನೀಡಿದರು.
ಸಂಘದ ಗೌರವಾಧ್ಯಕ್ಷ ಸದಾನಂದ ಹೆಗಡೆ, ಸದಸ್ಯರು ಹಾಗೂ ಹಿರಿಯ ನಾಗರಿಕರು ಉಪಸ್ಥಿತರಿದ್ದರು. ಹಿರಿಯ ನಾಗರಿಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ನಾಗರಾಜ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಮುರಳೀಧರ ವಂದಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಿರಿಯ ನಾಗರಿಕರ ರಕ್ಷಣೆಗಾಗಿ ಪ್ರತ್ಯೇಕ ಕಾಯಿದೆ ಜಾರಿಗೊಳಿಸಿದೆ. ಅವರ ಶ್ರೇಯೋಭಿವೃದ್ಧಿಗೆ ಹಲವು ಸೌಲಭ್ಯ ನೀಡಿದೆ. ಪ್ರತಿ ಜಿಲ್ಲೆಯಲ್ಲಿಯೂ ಹಿರಿಯ ನಾಗರಿಕರ ಸಹಾಯ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು. | ನ್ಯಾ.ಪಿ.ಆರ್. ಯೋಗೇಶ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ