ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳಲಿ

29 CRP-2A
ಚನ್ನರಾಯಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರೀಡಾಕೂಟವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟಿಸಿದರು. ಎಂ.ಆರ್.ಅನಿಲ್ ಕುಮಾರ್, ಎಸ್.ಎ. ಗಣೇಶ್, ಕವಿತಾರಾಜು, ಎಚ್.ಎನ್.ದೀಪಾ, ಕೆ.ಎನ್.ಅನಿಲ್, ಕೆ.ಟಿ.ಆನಂದ್ ಇತರರು ಇದ್ದರು.
Published on

ಚನ್ನರಾಯಪಟ್ಟಣ: ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸಲಿದ್ದು, ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಸಲಹೆ ನೀಡಿದರು.

ತಾಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ 2025-26 ನೇ ಸಾಲಿನ ಹಿರಿಯ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬರೂ ದೈಹಿಕವಾಗಿ ಬಲಿಷ್ಠರಾದಾಗ ಮಾತ್ರ ಮಾನಸಿಕವಾಗಿ ಏನಾದರೂ ಸಾಧಿಸಲು ಸಾಧ್ಯ. ಇದಕ್ಕೆ ಕ್ರೀಡೆ ಸಹಕಾರಿ. ವಿದ್ಯಾರ್ಥಿಗಳು ಕಲಿಕಾಸಕ್ತಿ ಜತೆಗೆ ಕ್ರೀಡೆಗಳಲ್ಲಿ ಪಾಲ್ಗೊಂಡು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಇನ್ನಷ್ಟು ವೃದ್ಧಿಸಿಕೊಳ್ಳಬೇಕು. ಕ್ರೀಡೆಗಳಿಂದ ಬುದ್ಧಿ ಚುರಾಕಾಗುವುದರಿಂದ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸ್ಫೂರ್ತಿಯಿಂದ ಭಾಗವಹಿಸಬೇಕು. ಶಿಕ್ಷಣದಷ್ಟೇ ಆದ್ಯತೆ ಕ್ರೀಡೆಗಳಿಗೂ ಇರಬೇಕು. ಯುವ ಪ್ರತಿಭೆಗಳು ಶಾಲಾ-ಕಾಲೇಜುಗಳಲ್ಲಿ ಆಯೋಜಿಸುವ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ರೀಡೆಯಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸುವವರಿಗೆ ವಿಶೇಷ ನೆರವು ನೀಡಲಾಗುವುದು. ಮಕ್ಕಳ ಆಸಕ್ತಿಯನ್ನು ಗಮನಿಸಿ ಶಿಕ್ಷಕರು ಅವರನ್ನು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ದೀಪಾ ಮಾತನಾಡಿ, ಬಹುಮಾನ, ಮಕ್ಕಳಿಗೆ ಮಧ್ಯಾಹ್ನದೂಟದ ಪ್ರಾಯೋಜಕತ್ವವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಅವರೇ ಮಾಡಿದ್ದು, ಇದರಿಂದ ಇಲಾಖೆ ಯಶಸ್ವಿಯಾಗಿ ಕ್ರೀಡಾಕೂಟ ಆಯೋಜಿಸಲು ಸಹಕಾರಿಯಾಗಿದೆ ಎಂದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎ.ಗಣೇಶ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ಕವಿತಾರಾಜು ತಂಡಗಳ ಪರಿಚಯ ಮಾಡಿಕೊಂಡರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಿ.ಎನ್.ರವಿ ಕ್ರೀಡಾಜ್ಯೋತಿ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಹದೇವ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಕೆ ಟಿ.ಆನಂದ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಆರ್.ಅನಿಲ್ ಕುಮಾರ್, ಬಿಆರ್‌ಸಿ ಕೆ.ಎನ್.ಅನಿಲ್, ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಕಾಳೇಗೌಡ, ರಾಜ್ಯ ಉಪಾಧ್ಯಕ್ಷ ವಿ.ಜಿ.ದ್ಯಾವೇಗೌಡ, ಬಿ.ಆರ್.ಗಾಯತ್ರಿ ಎಪಿಎಂಸಿ ಮಾಜಿ ಅಧ್ಯಕ್ಷ ಮಂಜಣ್ಣ ಸೇರಿದಂತೆ 600 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net