

ಹೂವಿನಹಡಗಲಿ: ಸರ್ಕಾರದಿಂದ ದೊರಕುವ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವ ಮೂಲಕ ಅಧಿಕಾರಿಗಳು ಕಾರ್ಯಪ್ರವರ್ತರಾಗಬೇಕು ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ತಾಪಂನ ರಾಜೀವಗಾಂಧಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತಾಪಂ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೃಷಿ ಇಲಾಖೆಯಿಂದ ತಾಲೂಕಿನ ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಪೂರೈಕೆ ಮಾಡಬೇಕು. ಎಲ್ಲಿಯೂ ಸಹ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕಳೆದ ಮುಂಗಾರಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿಲ್ಲ. ಈ ವರ್ಷ ರೈತರಿಗೆ ತಲುಪುವಂತೆ ಕಾರ್ಯನಿರ್ವಹಿಸಬೇಕು. ಪಟ್ಟಣದ ತಹಸೀಲ್ ಕಚೇರಿಯಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಸರ್ಕಾರದಿಂದ ನಿಗದಿಮಾಡಿದ ಹಣಕ್ಕಿಂತ ಹೆಚ್ಚಿನ ಹಣವನ್ನು ಸಾರ್ವಜನಿಕರಿಂದ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಅಧಿಕಾರಿಗಳು ಹಾಗೂ ತಹಸೀಲ್ದಾರ್‌ರು ಕಚೇರಿಯ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು ಎಂದರು.
ಇದನ್ನು ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಹಣ ಪಡೆದರೆ ಕ್ರಮ
ತಾಲೂಕಿನ ವಿವಿಧ ಗ್ರಾಮಗಳಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಿಬ್ಬಂದಿಗಳು ಉತ್ತಮವಾದ ಚಿಕಿತ್ಸೆ ನೀಡುತ್ತಿಲ್ಲ. ಆಸ್ಪತ್ರೆಯ ಅಧಿಕಾರಿಗಳು ಚಿಕಿತ್ಸೆ ನೀಡದೆ ದೂರದ ಊರುಗಳಿಗೆ ಶಿಫಾರಸು ಮಾಡುತ್ತಿದ್ದಾರೆ ಎಂಬ ದೂರುಗಳಿವೆ. ಈ ಕುರಿತು ವೈದ್ಯರು ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು. ಕಂದಾಯ ಇಲಾಖೆಯಿಂದ ನೀಡಬೇಕಾದ ಇ-ಸ್ವತ್ತನ್ನು ಸಕಾಲದಲ್ಲಿ ಜನರಿಗೆ ನೀಡಿ ಎಂದು ತಹಸೀಲ್ದಾರ್‌ಗೆ ಸೂಚನೆ ನೀಡಿದರು.
ತಾಪಂ ಇಒ ಉಮೇಶ ಎಂ, ಜಿಪಂ ಯೋಜನಾಧಿಕಾರಿ ಅಶೋಕ ತೋಟದ, ತಹಸೀಲ್ದಾರ್ ಅಮರೇಶ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕು ಸೇರಿದಂತೆ ತಾಲೂಕಿನ ಇತರ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ವರದಿ ಬಗ್ಗೆ ಚರ್ಚೆ: ಪಟ್ಟಣದ ಮಿನಿವಿಧಾನ ಸೌಧದಲ್ಲಿನ ಎರಡನೇ ಮಹಡಿಯಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರು ಅನುಭವಿಸುವ ಸಂಕಟ ಮತ್ತು ಸಮಸ್ಯೆಗಳ ಕುರಿತು ಜು.17ದಂದು ವಿಜಯವಾಣಿ ‘ಆಸ್ತಿನೋಂದಣಿಗೆ ಸಾರ್ವಜನಿಕರ ಹರಸಾಹಸ’ಎಂಬ ಶೀಷಿಕೆಯಡಿ ವರದಿ ಪ್ರಕಟಿಸಿತ್ತು. ಈ ವರದಿಯ ಹಿನ್ನೆಲೆಯಲ್ಲಿ ಶಾಸಕ ಕೃಷ್ಣನಾಯ್ಕ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಇಲ್ಲದಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.