

ಹನೂರು: ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದರ ಜತೆಗೆ ಮೂಲಸೌಕರ್ಯ ಒದಗಿಸಲು ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ಸೂಚನೆ ನೀಡಿದರು.
ತಾಲೂಕಿನ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಶನಿವಾರ ಅಯೋಜಿಸಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಈ ವರ್ಷ ಸಮರ್ಪಕ ಮಳೆಯಿಲ್ಲದ ಪರಿಣಾಮ ಅಂತರ್ಜಲ ಮಟ್ಟ ಕುಸಿದಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದು. ಆದ್ದರಿಂದ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಹೇಳಿದರು.
ನರೇಗಾ ಯೋಜನೆಯಡಿ ಜನರಿಗೆ ಉದ್ಯೋಗ ನೀಡುವುದರ ಮೂಲಕ ಕೆರೆ, ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಶಾಲಾ ಶೌಚಗೃಹಗಳ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಬೇಕು. ಜತೆಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಮುಖ್ಯವಾಗಿ ಮಿಣ್ಯಂ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಆನಂದಮೂರ್ತಿ, ತಾಪಂ ಇಒಗಳಾದ ಹನೂರಿನ ಉಮೇಶ್, ಕೊಳ್ಳೇಗಾಲದ ಶ್ರೀನಿವಾಸ್, ಸಹಾಯಕ ನಿರ್ದೇಶಕ ರವೀಂದ್ರ ಹಾಗೂ ಪಿಡಿಒಗಳು ಇದ್ದರು.