

ಶ್ರೀರಂಗಪಟ್ಟಣ: ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಪಟ್ಟಣದ ಪರಿವರ್ತನ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿವರ್ತನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚೆನ್ನಾಗಿ ಓದಿ ರ‌್ಯಾಂಕ್ ಬರುವುದೊಂದೇ ಮುಖ್ಯವಲ್ಲ. ನೀವು ಕಲಿತ ಶಿಕ್ಷಣವನ್ನು ಸಮಾಜದ ಏಳಿಗೆಗೆ ಬಳಸಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಅವಲೋಕಿಸಿ ನಿಮ್ಮೊಂದಿಗೆ ಸಮಾಜವನ್ನು ಮುನ್ನಡೆಸುವ ಮಟ್ಟಕ್ಕೆ ನಿಮ್ಮ ಜ್ಞಾನ ಮತ್ತು ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ತಿಳಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎ.ಬಿ.ರಮೇಶ್‌ಬಾಬು ಬಂಡಿಸಿದ್ದೇಗೌಡ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಕೆಲಸ ಆರಂಭಿಸುವ ಮುನ್ನ ಗುರುವಿನ ಮಾರ್ಗದರ್ಶನ ಪಡೆಯಬೇಕು. ನಿಮ್ಮ ಮುಂದೆ ಗುರಿ ಇರಬೇಕು, ಹಿಂದೆ ಗುರು ಇರಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ಪದವಿ ಪೂರ್ವ ಕಾಲೇಜು ಇಲಾಖೆ ಉಪನಿರ್ದೇಶಕ ಚಲುವಯ್ಯ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಅನಂತರಾಜ್, ಓಂಶ್ರೀನಿಕೇತನ ಟ್ರಸ್ಟ್ ಅಧ್ಯಕ್ಷ ಎಂ.ಪುಟ್ಟೆಗೌಡ ಇತರರು ಪಾಲ್ಗೊಂಡಿದ್ದರು.