

ಬೆಟ್ಟದಪುರ: ಆಧುನಿಕ ಜೀವನಶೈಲಿ ಹಾಗೂ ಆಹಾರ ಪದ್ಧತಿಯಡಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಮಾಜಿ ಶಾಸಕ ಎಚ್.ಸಿ. ಬಸವರಾಜು ಸಲಹೆ ನೀಡಿದರು.
ಸುನೀಲ್ಕುಮಾರ್ ಸ್ನೇಹ ಬಳಗ, ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಇತ್ತೀಚೆಗೆ ಗ್ರಾಮದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ರೈತರು ನಿರಂತರವಾಗಿ ದುಡಿಮೆ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯದ ಬಗ್ಗೆ ನಿರ್ಲಕ್ಷೃ ವಹಿಸುತ್ತಾರೆ. ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಶಿಬಿರ ಆಯೋಜಿಸಲಾಗಿದೆ ಎಂದರು.
ಸಮಾಜ ಸೇವಕ ಸುನೀಲ್ ಕುಮಾರ್ ಮಾತನಾಡಿ, ಜನರ ಅನುಕೂಲಕ್ಕಾಗಿ ಇಂತಹ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ದೊಡ್ಡ ಚಿಕಿತ್ಸೆಗಳನ್ನು ಉಚಿತವಾಗಿ ಆಯೋಜಿಸುವ ಆಲೋಚನೆಯಿದ್ದು, ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಸಹಯೋಗ ಪಡೆಯಲಾಗುವುದು ಎಂದರು.
ಶಿಬಿರದಲ್ಲಿ ಸುಮಾರು 60ಕ್ಕೂ ಹೆಚ್ಚು ರೋಗಿಗಳ ತಪಾಸಣೆ ಮಾಡಲಾಯಿತು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ರಾಜೇಂದ್ರ, ಮುಖಂಡರಾದ ವಿಕ್ರಂರಾಜ್, ಆರ್.ಟಿ ಸತೀಶ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಹಾಗೂ ಸ್ಥಳೀಯರು ಇದ್ದರು.