

ಕೊಳ್ಳೇಗಾಲ: ಪಟ್ಟಣದ ಶ್ರೀ ಗುರುಮಲ್ಲೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ ಮಕ್ಕಳಿಗೆ ಶುಕ್ರವಾರ ಅಕ್ಷರಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಕಾಮಗೆರೆಯ ಶ್ರೀ ಗುರುಮಲ್ಲೇಶ್ವರ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಹೊಂಡರಬಾಳು ಮಠದ ಶ್ರೀ ಪ್ರಸನ್ನ ಮಲ್ಲಿಕಾರ್ಜುನ ಸ್ವಾಮೀಜಿ ಚಾಲನೆ ನೀಡಿದರು.
ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಆಗಿರುತ್ತಾರೆ. ಆದ್ದರಿಂದ ಮನೆಯಲ್ಲಿ ಮೊದಲು ಅಕ್ಷರಾಭ್ಯಾಸ ಆಗಬೇಕು. ಗುರುಮಲ್ಲೇಶ್ವರ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಶ್ರಮಿಸಲಾಗುತ್ತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಸನ್ನ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಮಕ್ಕಳಿಗೆ ಬಾಲ್ಯದಲ್ಲೆ ಪಠ್ಯದೊಂದಿಗೆ ಸಂಸ್ಕಾರ ಕಲಿಸಬೇಕು ಎಂದರು.
ಶ್ರೀ ಗುರುಮಲ್ಲೇಶ್ವರ ಪ್ರೌಢಶಾಲೆಯ ಕಾರ್ಯದರ್ಶಿ ವೃಷಭೇಂದ್ರ, ಮುಖ್ಯ ಶಿಕ್ಷಕಿ ಶಿವನಾಗಮ್ಮ ಇತರರಿದ್ದರು.