

ಮಳವಳ್ಳಿ: ವಿವಿಧ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ವೇತನವನ್ನು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅದರಂತೆ ಕನಿಷ್ಠ ವೇತನ ಜಾರಿಗೊಳಿಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಪಡೆ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಚಂದ್ರಕುಮಾರ್ ಆಗ್ರಹಿಸಿದರು.
ಪಟ್ಟಣದಲ್ಲಿ ಬುಧವಾರ ತಹಸೀಲ್ದಾರ್ ಲೋಕೇಶ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ಕಾರ್ಮಿಕರ ಸಚಿವ ಸಂತೋಷ್ ಲಾಡ್ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಪಡಿಸುವುದಾಗಿ ಕಾರ್ಮಿಕ ದಿನಾಚರಣೆಯಂದು ಹೇಳಿಕೆ ನೀಡಿದ್ದರು. 70 ವಲಯಗಳಲ್ಲಿ ಕಾರ್ಮಿಕರು ದುಡಿಯುತ್ತಿದ್ದು, ಅವರಿಗೆ ಕನಿಷ್ಠ ವೇತನ ಸಿಗುತ್ತಿಲ್ಲ. ಕನಿಷ್ಠ ವೇತನ ಜಾರಿಗೊಳಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಡಳಿ ರಚನೆ ಮಾಡಿ ಕ್ರಮ ವಹಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಎಲ್ಲವೂ ನಡೆಯಲಿ ಎಂದರು.
2017ರ ನಂತರ ಕಾರ್ಮಿಕರ ಕನಿಷ್ಠ ವೇತನ ಮತ್ತೆ ಪರಿಷ್ಕರಣೆಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ವೇತನ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಿದೆ. ಆಗ ಶೇ.10 ರಷ್ಟು ಮಾತ್ರವೇ ವೇತನ ಪರಿಷ್ಕರಣೆ ಮಾಡಲಾಗಿತ್ತು. ಆದರೆ ಇದಕ್ಕೆ ಕಾರ್ಮಿಕ ಸಂಘಟನೆಗಳು ಒಪ್ಪದ ಕಾರಣ ನ್ಯಾಯಾಲಯದ ಮೆಟ್ಟಿಲೇರಿ ಅದಕ್ಕೆ ತಡೆ ಕೂಡ ತರಲಾಗಿತ್ತು. ಇದೀಗ ಕಾರ್ಮಿಕ ಸಚಿವರು 31,000 ರೂ. ನಿಗದಿ ಪಡಿಸುವುದಾಗಿ ಹೇಳಿದ್ದಾರೆ. ಅದರಂತೆ ಕೂಡಲೇ ಮಂಡಳಿ ರಚಿಸಿ ಪರಿಷ್ಠರಣೆಗೆ ಕ್ರಮವಹಿಸಬೇಕೆಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಧು ಇದ್ದರು.