

ಹೊಳೆನರಸೀಪುರ: ಸರ್ಕಾರಿ ಅಧಿಕಾರಿಗಳು, ಪತ್ರಕರ್ತರು ಜವಾಬ್ದಾರಿಯುತವಾಗಿ ಮತ್ತು ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸುಸ್ಥಿರ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್. ವೇಣುಕುಮಾರ್ ತಿಳಿಸಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ 2025 ನೇ ಸಾಲಿನ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ವರ್ಷದ 365 ದಿನವೂ ಪತ್ರಕರ್ತರು ಕಾರ್ಯನಿರತರಾಗಿದ್ದು, ಪತ್ರಕರ್ತರ ಶ್ರೇಯೋಭಿವೃದ್ಧಿ ಮತ್ತು ಹಿತರಕ್ಷಣೆಗೆ ಕಾರ್ಯನಿರತ ಪತ್ರಕರ್ತರ ಸಂಘ ಸದಾ ಸಿದ್ಧ ಎಂದು ಭರವಸೆ ನೀಡಿದರು.
ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ, ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ಸೇತುವೆಯಂತೆ ಪತ್ರಕರ್ತರು ಕಾರ್ಯ ನಿರ್ವಹಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರವಿ ನಾಕಲಗೂಡು ಮಾತನಾಡಿ, ಪತ್ರಿಕೋದ್ಯಮ ಉದ್ಯಮವಾಗಿ ಬದಲಾಗಿದೆ. ಸಾಮಾಜಿಕ ಜಾಲತಾಣ ಬೃಹದಾಕಾರವಾಗಿ ಬೆಳೆದು ನಿಂತಿದೆ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆಗಿ ಹೊರಹೊಮ್ಮಿದ ಕು.ಪೂರ್ಣಾ ಅವರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಎಸ್.ವಿಶ್ವನಾಥ್ ಅವರು ರಚಿಸಿದ ನಡೆದಾಡುವ ದೇವರಿಗೆ ವಿಶ್ವ ನಮನ ಮತ್ತು ಧರ್ಮಸ್ಥಳದ ದೇವತಾ ಮನುಷ್ಯನಿಗೆ ವಿಶ್ವ ನಮನ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಬಿ.ವೆಂಕಟೇಶ್, ರಾಷ್ಟ್ರೀಯ ಪತ್ರಿಕಾ ಮಂಡಳಿ ಸದಸ್ಯ ಕೆ.ಆರ್.ಮಂಜುನಾಥ್, ರಾಜ್ಯ ಸಮಿತಿ ಸದಸ್ಯ ಜಿ.ಪ್ರಕಾಶ್, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಬಿ.ಸಿ.ಶಶಿಧರ್, ಪುರಸಭೆ ಅಧ್ಯಕ್ಷ ಎಚ್.ಕೆ.ಪ್ರಸನ್ನ, ಪುರಸಭೆ ಮುಖ್ಯಾಧಿಕಾರಿ ಯು.ಎನ್.ಶಿವಶಂಕರ್, ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್, ಡಾ.ರಮೇಶ್, ಡಾ.ಸತ್ಯಪ್ರಕಾಶ್, ಡಾ.ನಟರಾಜ್ ಇತರರಿದ್ದರು.