

ಮದ್ದೂರು: ಸರ್ಕಾರ ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ ನೀಡುತ್ತಿದ್ದು, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವುದರೊಂದಿಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದರು. ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದೆಂಬ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ರೋಗಿಗಳೊಂದಿಗೆ ಪ್ರೀತಿಯಿಂದ ವರ್ತಿಸಬೇಕು. ಒಂದು ವೇಳೆ ರೋಗಿಗಳ ಜತೆ ಅನುಚಿತವಾಗಿ ವರ್ತನೆ ಮಾಡಿದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಭಾಗವಹಿದ್ದರು. ಪುರಸಭೆ ಅಧ್ಯಕ್ಷೆ ಕೋಕಿಲಾ ಅರುಣ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಟಿಎಚ್‌ಒ ಡಾ.ರವೀಂದ್ರ, ಮುಖ್ಯ ವೈದ್ಯಾಧಿಕಾರಿ ಡಾ.ಬಾಲಕೃಷ್ಣ, ಬಿಇಓ ಕಾಳೀರಯ್ಯ, ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಮಹಾದೇವಪ್ರಸಾದ್, ಎಸ್.ರಾಜೇಶ್, ಎಂ.ಸಿ.ರಮೇಶ್, ಆರಿಫ್ ಪಾಷಾ, ಬಿ.ಸಿ.ಜೈಪ್ರಕಾಶ್, ರಾಜು, ರಾಜಶೇಖರ್, ಶಮೀನಾ ಖಾನಂ ಇದ್ದರು.