ಕುಶಾಲನಗರ ; ಮಕ್ಕಳು ಕಲೆ, ಸಾಹಿತ್ಯ, ವಿಜ್ಞಾನ ಪುಸ್ತಕಗಳನ್ನು ಓದುವ ಪ್ರವೃತ್ತಿಯೊಂದಿಗೆ ಬರವಣಿಗೆಯ ಕೌಶಲ ಬೆಳೆಸಿಕೊಂಡು ಉತ್ತಮ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಸಲಹೆ ನೀಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹೆಬ್ಬಾಲೆ ವಲಯ ಕಸಾಪ ಘಟಕ ಹಾಗೂ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಭಾಷಾ ಸಂಘದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಬಿ.ಜಿ.ರಘುನಾಥನಾಯಕ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವುದು ಮತ್ತು ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವುದು ಕನ್ನಡ ಸಾಹಿತ್ಯ ಪರಿಷತ್ ಉದ್ದೇಶವಾಗಿದೆ ಎಂದರು.
ನಾಡಿನ ಸಾಹಿತಿಗಳ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಕೊಂಡೊಯ್ಯುವ ಮಹತ್ತರ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯ. ಜಿಲ್ಲೆಯ ಗಡಿನಾಡಾದ ವಿರಾಜಪೇಟೆಯಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಕರ್ನಾಟಕ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅನೇಕ ಕನ್ನಡ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಕನ್ನಡ ಭಾಷೆ, ಸಾಹಿತ್ಯ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಜಿಲ್ಲೆಯಲ್ಲಿ ಹಳ್ಳಿಯ ಕಡೆಗೆ ಹಾಗೂ ಶಾಲೆಯ ಕಡೆಗೆ ಸಾಹಿತ್ಯದ ನಡಿಗೆ ಎಂಬಿತ್ಯಾದಿ ಕಾರ್ಯಕ್ರಮಗಳ ಮೂಲಕ ಸಾಹಿತ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಅಧ್ಯಕ್ಷ ಎಚ್.ವಿ.ಶಿವಪ್ಪ ಮಾತನಾಡಿ, ಮಕ್ಕಳನ್ನು ಕ್ರಿಯಾಶೀಲರನ್ನಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ಮಕ್ಕಳಲ್ಲಿ ಸಾಹಿತ್ಯದ ಪ್ರೇಮ ಬೆಳೆಸಲು ಮುಂದಾಗಬೇಕು. ಮಕ್ಕಳಲ್ಲಿ ಸಾಹಿತ್ಯ ಪ್ರೇಮ ಬಂದರೆ ಮಾತ್ರ ನಿಜವಾದ ಸಾಹಿತ್ಯಲೋಕ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಕರ ಕರ್ತವ್ಯ ಪ್ರಮುಖವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು. ಕವಿಗಳು, ಸಾಹಿತಿಗಳ ಜೀವನ ಕ್ರಮ ಮತ್ತು ಅವರ ಸಾಹಿತ್ಯದ ಕೊಡುಗೆಗಳ ಬಗ್ಗೆ ಅಧ್ಯಯನ ಮಾಡಿ ಸ್ವತಃ ಪ್ರಬಂಧ ಬರೆಯುವ ಕೌಶಲ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್, ಶಾಲಾ ಮುಖ್ಯ ಶಿಕ್ಷಕ ಬಸವರಾಜಶೆಟ್ಟಿ, ಕಸಾಪ ತಾಲೂಕು ಗೌರವ ಕೋಶಾಧಿಕಾರಿ ಕೆ.ವಿ.ಉಮೇಶ್, ಪದಾಧಿಕಾರಿ ಡಿ.ಆರ್. ಸೋಮಶೇಖರ್, ಕಸಾಪ ಸದಸ್ಯರಾದ ಎಚ್.ಪಿ.ಉದಯ್ ಕುಮಾರ್, ಟಿ.ಎಸ್.ಶಾಂಭಶಿವಮೂರ್ತಿ, ಶಿಕ್ಷಕ ಸಿ.ಡಿ.ಲೋಕೇಶ್, ಶಿಕ್ಷಕಿ ಡಿ.ಕವಿತಾ, ಶಿಕ್ಷಕ ಭೋಜೇಗೌಡ ಇತರರಿದ್ದರು.