ಫಲಾನುಭವಿಗಳಿಗೆ ಸೌಲಭ್ಯ ಸಕಾಲಕ್ಕೆ ತಲುಪಲಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು

10
Published on

ಮೈಸೂರು: ದೇಶದ ಬೆನ್ನೆಲುಬಾಗಿರುವ ರೈತರಿಗೆ ಸರ್ಕಾರದಿಂದ ತಲುಪಬೇಕಾದ ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲೆಯ ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನೀಡುವ ಪರಿಹಾರಗಳ ಮೇಲ್ವಿಚಾರಣೆ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ನಿರ್ದೇಶನ ನೀಡಿದರು.

ಮೈಸೂರು ಜಿಲ್ಲೆಯಲ್ಲಿ ರೈತರಿಗೆ ಎಲ್ಲ ರೀತಿಯಲ್ಲೂ ಸರ್ಕಾರದಿಂದ ನೀಡಲಾಗುವ ಎಲ್ಲ ಸೌಲಭ್ಯಗಳನ್ನು ಅವರಿಗೆ ಮತ್ತು ಅವರ ಕುಟುಂಬದವರಿಗೆ ಕಡ್ಡಾಯವಾಗಿ ಒದಗಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ರೈತರಿಗೆ ಮತ್ತು ಅವರ ಕುಟುಂಬದವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ರೈತರ ಮಕ್ಕಳಿಗೆ ಶಿಕ್ಷಣ ಒದಗಿಸುವಲ್ಲಿ ಸಹಕಾರ ನೀಡಬೇಕು. ಅಲ್ಲದೆ ಆಕಸ್ಮಿಕ ಬಣವೆ ನಷ್ಟ, ಹಾವು ಕಡಿತದ ಪ್ರಕರಣಗಳು ಇತ್ಯಾದಿ ಪ್ರಕರಣಗಳಲ್ಲಿಯೂ ರೈತರಿಗೆ ಸಹಾಯ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚನೆ ನೀಡಿದರು.

ಕೃಷಿ ಚಟುವಟಿಕೆ, ರೈತರಿಗೆ ಸಕಾಲದಲ್ಲಿ ಸವಲತ್ತು ವಿತರಿಸುವಲ್ಲಿ ನಿರ್ಲಕ್ಷ ವಹಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮೈಸೂರು ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆ , ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net