

ಮೈಸೂರು: ಜಾತಿಗಣತಿ ವರದಿವನ್ನು ಸರ್ಕಾರ ಅಂಗೀಕರಿಸಿ, ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿದ್ದನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ ಎಂದರು.
ಜಾತಿ ಜನಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲವು ಪಟ್ಟಭದ್ರ ಜಾತಿವಾದಿ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು ತೀವ್ರ ಅಸಮಾಧಾನ ಹೊರಹಾಕಿ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ರಾಜ್ಯದ ಜನಸಂಖ್ಯೆಯ ಬಹು ಭಾಗವಾಗಿರುವ ಆದಿವಾಸಿಗಳು, ಅಲೆಮಾರಿಗಳು, ದಲಿತರು, ಹಿಂದುಳಿದವರು ಅಲ್ಪಸಂಖ್ಯಾತ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿವೆ ಎಂದು ಹೇಳಿದರು.
ಆದರೆ, ಜಾತಿ ಕೇಂದ್ರಿತ ಪಕ್ಷ ರಾಜಕಾರಣ ಈ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದವು. ಹೀಗಾಗಿ ದುರ್ಬಲ ತಳ ಸಮುದಾಯಗಳ ಉನ್ನತಿಗಾಗಿ ಯೋಜನೆಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.
ಜನಗಣತಿ ವರದಿಯ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಈಗಿರುವ ಶೇ.50ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಮಿತಿ ಮುಖಂಡ ಬೆಟ್ಟಯ್ಯ ಕೋಟೆ, ಶಂಭುಲಿಂಗಸ್ವಾಮಿ, ಹೆಗ್ಗನೂರು ನಿಂಗರಾಜು, ಬಿ.ಡಿ.ಶಿವಬುದ್ಧಿ ಇತರರು ಇದ್ದರು.