

ಶಿವಮೊಗ್ಗ: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆ ಮುಗಿಯುವವರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಮಹೇಶ್ ಕೊಳ್ಳೆಗಾಲ ಆಗ್ರಹಿಸಿದರು.
ತನಿಖೆ ಮುಗಿದು ತಪ್ಪಿತಸ್ಥರಲ್ಲ ಎಂಬುದು ಸಾಬೀತಾದರೆ ಮತ್ತೆ ಅವರೇ ಸಿಎಂ ಹುದ್ದೆ ಅಲಂಕರಿಸಲಿ. ಅದಕ್ಕೆ ಯಾರ ಅಭ್ಯಂತರವೂ ಇಲ್ಲ. ಆದರೆ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಬೆದರಿಕೆ ತಂತ್ರ ಅನುಸರಿಸುತ್ತಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಆ.22ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ರಾಜ್ಯಪಾಲರ ಪರವಾಗಿ ಹೋರಾಟ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್‌ಟಿ ಮತಗಳನ್ನು ಪಡೆದು ಅವರ ಯೋಜನೆಗಳಿಗೆ ಕತ್ತರಿ ಹಾಕಿದೆ. ಪರಿಶಿಷ್ಟ ಪಂಗಡದ ಅಭಿವೃದ್ಧಿಗಿರುವ ಹಣ ದುಬರ್ಳಕೆ ಮಾಡಿಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಕೊಟ್ಯಂತರ ರೂ. ಖಾಸಗಿ ಬ್ಯಾಂಕ್‌ಗಳಿಗೆ ವರ್ಗಾವಣೆ ಮಾಡುವ ಮೂಲಕ ಭಾರಿ ಅವ್ಯವಹಾರದಲ್ಲಿ ಭಾಗಿಯಾಗಿದೆ ಎಂದು ದೂರಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಇಲಾಖೆ ಮಂತ್ರಿ ಸಿಕ್ಕಿ ಹಾಕಿಕೊಂಡಿದ್ದಾರೆ. ನಿಗಮದಲ್ಲಿ 187 ಕೋಟಿ ಅಲ್ಲ, 87 ಕೋಟಿ ರೂ. ಭ್ರಷ್ಟಾಚಾರ ಆಗಿದೆ ಎಂದು ಸ್ವತಃ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. 2022-23ರಲ್ಲಿ 11,140 ಕೋಟಿ ರೂ. ಎಸ್‌ಸಿ-ಎಸ್‌ಟಿ ಹಣವನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದಾರೆ. 2023-24ರಲ್ಲಿ ಎಸ್‌ಸಿ-ಎಸ್‌ಟಿಗೆ ಸೇರಿದ್ದ 14 ಸಾವಿರ ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಉಪಾಧ್ಯಕ್ಷ ಕುಪೇಂದ್ರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಸಿ.ಎಚ್.ಮಾಲತೇಶ್, ಎಂ.ಬಿ.ಹರಿಕೃಷ್ಣ , ಎಸ್‌ಟಿ ಮೋರ್ಚಾ ಅಧ್ಯಕ್ಷ ಹರೀಶ್ ನಾಯಕ್, ಪ್ರಮುಖರಾದ ಸಂತೋಷ್, ಸಿ.ಮೂರ್ತಿ, ಲಿಂಗರಾಜ್, ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.