

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೇಶಕ್ಕೆ ಮಾದರಿಯಾಗುವಂತೆ ನಡೆಸಿ. ಸರ್ಕಾರ ನಿಮ್ಮ ಜತೆಗಿದೆ ಎಂದು ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ವಾರ್ತಾಭವನದ ಆವರಣದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪರ್ಕ ಕಚೇರಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ರೂ. ಅನುದಾನ ನೀಡಿದೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಕಳೆಗಟ್ಟುವ ರೀತಿಯಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಬೇಕು. ಸಾಹಿತಿಗಳು, ಕಲಾವಿದರು, ಬರಹಗಾರರು ಸೇರಿದಂತೆ ಎಲ್ಲರೂ ಒಗ್ಗಟ್ಟಿನಿಂದ ಸಮ್ಮೇಳನದ ಯಶಸ್ಸಿಗೆ ಮುಂದಾಗಬೇಕು, ಕನ್ನಡದ ಗೌರವ, ವೈಚಾರಿಕತೆ ಹೆಚ್ಚಿಸುವ ಕೆಲಸವಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಮಾತನಾಡಿ, ಕಚೇರಿ ಉದ್ಘಾಟನೆಯೊಂದಿಗೆ ಸಮ್ಮೇಳನದ ಕಾರ್ಯ ಚಟುವಟಿಕೆ ಆರಂಭಿಸಲಾಗಿದೆ. ನವೆಂಬರ್ 11, 12 ಹಾಗೂ 13ರಂದು ಸಮ್ಮೇಳನಕ್ಕೆ ದಿನಾಂಕ ನಿಗದಿಗೊಳಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿಗಳು ಅಧಿಕೃತವಾಗಿ ಘೊಷಣೆ ಮಾಡಲಿದ್ದಾರೆ. ಸಮ್ಮೇಳನದಲ್ಲಿ 86 ಪುಸ್ತಕಗಳನ್ನು ಹೊರತರಲಾಗುವುದು. ಇದರಲ್ಲಿ 37 ಪುಸ್ತಕಗಳು ಹಾವೇರಿಗೆ ಸಂಬಂಧಪಟ್ಟದ್ದಾಗಿವೆ. ಕನ್ನಡ ಪುಸ್ತಕ ಹೊರತುಪಡಿಸಿ ಬೇರೆ ಪುಸ್ತಕಗಳ ಮಾರಾಟಕ್ಕೆ ಅವಕಾಶವಿರುವುದಿಲ್ಲ. ಸ್ಥಳೀಯ ಕಲಾವಿದರಿಗೆ ಉತ್ಸವದಲ್ಲಿ ಆದ್ಯತೆ ನೀಡಲಾಗುವುದು ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ಶೀಘ್ರವೇ ಆಪ್ ಆರಂಭಿಸಲಾಗುವುದು. ರಾಜ್ಯಾದ್ಯಂತ ಸಮ್ಮೇಳನ ರಥ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಕ್ಕೆ ಕನ್ನಡದ ಮೊಟ್ಟ ಮೊದಲು ನಿಘಂಟು ರಚಿಸಿದ ಕಿಟೆಲ್ ಅವರ ಮೊಮ್ಮೊಗಳು ಹಾಗೂ ಕೆನಡಾ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಸದಸ್ಯ ಚಂದ್ರು ಆರ್ಯ, ವಿದೇಶದಲ್ಲಿ ನೆಲೆಸಿರುವ ಸಾಧಕ ಕನ್ನಡಿಗರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿದೆ. ಇದನ್ನು ಒಂದು ಐತಿಹಾಸಿಕ ಸಮ್ಮೇಳನವಾಗಿಸುವ ಕನಸು ಹೊಂದಲಾಗಿದೆ ಎಂದರು.
ಶಾಸಕ ನೆಹರು ಓಲೇಕಾರ ಮಾತನಾಡಿ, ಹಾವೇರಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ ಬಹುವರ್ಷಗಳ ನಂತರ ಸಿಕ್ಕಿದೆ. ಜಿಲ್ಲೆಯ ಜನರ ಬಹುದಿನಗಳ ಕನಸು ನನಸಾಗುತ್ತಿದೆ. ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈ ಜೋಡಿಸಬೇಕು ಎಂದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಸಮ್ಮೇಳನಕ್ಕೆ ಅನುದಾನ ಕೊರತೆಯಿಲ್ಲ. ಜಿಲ್ಲಾಡಳಿತ ಸಿದ್ಧವಾಗಿದೆ ಎಂದರು.
ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು.
ಜಿಲ್ಲಾ ವಾರ್ತಾಧಿಕಾರಿ ಡಾ. ಬಿ.ಆರ್. ರಂಗನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ಗೌರವ ಕೋಶಾಧ್ಯಕ್ಷ ಎಸ್.ಎನ್. ದೊಡ್ಡಗೌಡರ, ಕಾರ್ಯದರ್ಶಿ ಬಿ.ಪಿ. ಶಿಡೇನೂರ ಇತರರಿದ್ದರು. ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಸ್ವಾಗತಿಸಿದರು. ತಾಲೂಕಾಧ್ಯಕ್ಷ ವೈ.ಬಿ. ಆಲದಕಟ್ಟಿ ವಂದಿಸಿದರು.