

ಚಿಕ್ಕೋಡಿ: ಅತಿಥಿ ಉಪನ್ಯಾಸಕರ ಮುಷ್ಕರದಿಂದ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಹೀಗಾಗಿ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಗ್ರೇಡ್-2 ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಪಟ್ಟಣದ ಬಸ್ ನಿಲ್ದಾಣದಿಂದ ಮಿನಿವಿಧಾನ ಸೌಧದವರೆಗೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನಾ ರ‌್ಯಾಲಿ ನಡೆಸಿದರು. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹೆಚ್ಚಿನ ಪ್ರಮಾಣದ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ನವೆಂಬರ್ 23ರಿಂದ ಸೇವೆ ಕಾಯಂ ಮಾಡಬೇಕು ಎಂದು ಮುಷ್ಕರ ನಡೆಸುತ್ತಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.
ಸಮೀರಾ ಸಯ್ಯದ್, ಬಸಿರಾ ಸನದಿ, ಸೌಂದರ್ಯ ವಾಗೆ, ಅಭಿಷೇಕ ಮಸರಗುಪ್ಪಿ, ಪ್ರಜ್ವಲ ಎಂಟೆತ್ತಿನವರ, ಪೂಜಾ ಕಾಂಬಳೆ, ಆಸ್ಮಾ ಸನದಿ, ಪ್ರದೀಪ ಮಾದರ ಇತರರಿದ್ದರು.