

ಮೈಸೂರು: ಬಾಲ ಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಬಹುದಾಗಿದ್ದು, ಮೈಸೂರನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸಿ ಇತರರಿಗೂ ಪ್ರೇರಣೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕಾರ್ಯ ಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸುವ ಸ್ವಯಂ ಸೇವಾ ಸಂಸ್ಥೆಗಳಿಗೆ ಬಾಲಮಿತ್ರ ಎಂದು ಪ್ರಮಾಣಪತ್ರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳು ಮೈಸೂರು ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೊಧಿ ದಿನವನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳಲ್ಲಿಯೂ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಬೇಕು.
ಜಿಲ್ಲೆಯಲ್ಲಿರುವ ಪ್ರತಿ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಂತೆ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಧೃಢೀಕರಿಸಿರುವ ಫಲಕ ಹಾಕಲು ಕ್ರಮ ವಹಿಸಬೇಕು. ಪರವಾನಗಿ ಪಡೆಯದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಮೈಸೂರು ಉಪ ವಿಭಾಗಾಧಿಕಾರಿ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಸರ್ಕಾರೇತರ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.