

ವಿಜಯಪುರ: ಸಂಶೋಧನಾ ವಿದ್ಯಾರ್ಥಿನಿಯರು ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಸಂಶೋಧನೆ ಕೈಗೊಳ್ಳಬೇಕು ಎಂದು ಅಕ್ಕಮಹಾದೇವಿ ಮಹಿಳಾ ವಿವಿ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಹೇಳಿದರು.
ನಗರ ಹೊರವಲಯದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಘಟಕದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲ್ಯಾಪ್‌ಟಾಪ್‌ಗಳ ಸದುಪಯೋಗವನ್ನು ಸಂಶೋಧನೆಗಷ್ಟೇ ಸೀಮಿತಗೊಳಿಸದೇ ಮಾಹಿತಿ ವಿಶ್ಲೇಷಣೆಗಳನ್ನು ಮಾಡಿ ಆ ಮೂಲಕ ಆರ್ಥಿಕವಾಗಿ ಸದೃಢರಾಗಬಹುದೆಂದು ಸಲಹೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ ಮಾತನಾಡಿದರು. ವಿವಿಯ ಕುಲಸಚಿವ ಎಸ್.ಎಸ್. ಸೋಮನಾಳ ಮತ್ತಿತರರಿದ್ದರು.
ಘಟಕದ ನಿರ್ದೇಶಕಿ ಪ್ರೊ. ಲಕ್ಷ್ಮಿದೇವಿ ವೈ., ಸ್ವಾಗತಿಸಿದರು. ಶಿಕ್ಷಣ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಸರಸ್ವತಿ ಬೆಳ್ಳುಂಡಗಿ ಪರಿಚಯಿಸಿದರು. ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಸುಮಾ ತಡವಳಕರ ವಂದಿಸಿದರು. ಮಹಿಳಾ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ತೇಜಸ್ವಿನಿ ಚಾಂದಕವಟೆ ನಿರೂಪಿಸಿದರು.