ಅನುದಾನ ಸಮರ್ಪಕವಾಗಿ ನಿರ್ವಹಣೆಯಾಗಲಿ

24 HANUR 2
ಹನೂರಿನಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ಸಭೆ ನಡೆಯಿತು. ಗುರುಪ್ರಸಾದ್, ಉಮೇಶ್, ಡಾ. ಸಿದ್ದರಾಜು, ಡಾ.ಪ್ರಕಾಶ್ ಇತರರು ಇದ್ದರು.
Published on

ಹನೂರು : ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ 15ನೇ ಹಣಕಾಸು ಯೋಜನೆಯ ಅನುದಾನ ಸರಿಯಾದ ರೀತಿಯಲ್ಲಿ ನಿರ್ವಹಣೆಯಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಅಗತ್ಯ ಕ್ರಮವಹಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸೂಚಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

15ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರು, ವಿದ್ಯುತ್, ಚರಂಡಿ ಸೇರಿದಂತೆ ಇನ್ನಿತರ ಕೆಲವು ಕೆಲಸ ಕಾರ್ಯಗಳಿಗೆ ಕಾಮಗಾರಿಯನ್ನು ಕೈಗೊಳ್ಳಲು ಪ್ರತಿ ಗ್ರಾಪಂಗೆ ಅನುದಾನ ದೊರಕುತ್ತಿದೆ. ಆದರೆ ಸಮರ್ಪಕವಾಗಿ ನಿರ್ವಹಣೆಯಾಗದಿರುವುದು ಗಮನಕ್ಕೆ ಬಂದಿದೆ. ಇದರಿಂದ ಕಾಮಗಾರಿಯಲ್ಲಿ ಪರಿಪೂರ್ಣತೆಯನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಅನುದಾನ ದುರ್ಬಳಕೆಗೆ ಎಡೆ ಮಾಡಿಕೊಟ್ಟಂತಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಅಗತ್ಯ ಕ್ರಮವಹಿಸಿ ಅನುದಾನ ಸರಿಯಾದ ರೀತಿಯಲ್ಲಿ ನಿರ್ವಹಣೆಯಾಗಬೇಕು. ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಇದರಲ್ಲಿ ನಿರ್ಲಕ್ಷ್ಯ ಸಲ್ಲದು ಎಂದು ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸ್ವಾಮಿತ್ವವನ್ನು ಯಶಸ್ವಿಗೊಳಿಸಿ: ಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಎಲ್ಲರ ಆದ್ಯ ಕರ್ತವ್ಯ. ಜನರು ಆಸ್ತಿಯ ಬಗ್ಗೆ ನಿಖರವಾದ ದಾಖಲೆಯನ್ನು ಹೊಂದುವ ಸಲುವಾಗಿ ಸರ್ಕಾರ ಸ್ವಾಮಿತ್ವ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ಈ ಕಾರ್ಯ ವಿಳಂಬ ಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ಈ ಬಗ್ಗೆ ಅಗತ್ಯ ಮುತುರ್ವಜಿ ವಹಿಸಿ ಯಶಸ್ವಿಗೊಳಿಸಬೇಕು. ಇದರಿಂದ ಜನರಿಗೆ ಅನುಕೂಲವಾಗುವುದು ಒಂದಡೆಯಾದರೆ, ಗ್ರಾಪಂಗಳಲ್ಲಿ ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಸಹಕಾರಿಯಾಗಿದೆ. ಇನ್ನು ತಾಲೂಕಿನಲ್ಲಿ ವ್ಯಾಪಾರ ವಹಿವಾಟು ಉತ್ತಮವಾಗಿ ನಡೆಯುತ್ತಿದೆ. ಆದರೆ ತೆರಿಗೆ ಸಂಗ್ರಹವಾಗುತ್ತಿಲ್ಲ. ಈ ಬಗ್ಗೆ ಗಮನಹರಿಸಿ ತೆರಿಗೆ ಸಂಗ್ರಹಕ್ಕೆ ಮುಂದಾಗಬೇಕು. ಪ್ರಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ತಿಳಿಸಿದರು.

ಇದೇ ವೇಳೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸೌಕರ್ಯಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಯಿತು. ಸಭೆಯಲ್ಲಿ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ತಾಪಂ ಇಒ ಉಮೇಶ್, ಸಹಾಯಕ ನಿರ್ದೇಶಕಿ ರಾಧಾ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸಿದ್ದರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್ ಹಾಗೂ ಪಿಡಿಒಗಳು ಇದ್ದರು.

ಮೀನುಗಾರಿಕೆ ಪರಿಕರ, ಹೊಲಿಗೆ ಯಂತ್ರ, ವಿತರಣೆ : ಸಭೆಗೂ ಮುನ್ನ ಶಾಸಕರು ಮೀನುಗಾರಿಕೆ ಇಲಾಖೆ ವತಿಯಿಂದ 21 ಫಲಾನುಭವಿಗಳಿಗೆ ಮೀನು ಹಿಡಿಯುವ ಪರಿಕರವನ್ನು ವಿತರಿಸಿ ಮಾತನಾಡಿ, ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ತಿಳಿಸಿದರು. ಇದೇ ವೇಳೆ 10 ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.

ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಜೆ.ಎಂ ಪ್ರಶಾಂತ್, ಕೈಗಾರಿಕಾ ವಿಸ್ತರಣಾಧಿಕಾರಿ ಪುಷ್ಪಲತಾ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net