

ಕೋಲಾರ: ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರಲ್ಲದೆ, ಅಲ್ಪಸಂಖ್ಯಾತರಿಗೆ ಮೀಸಲುಟ್ಟಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುವಂತೆ ಮಾಡಬೇಕು ಎಂದು ಸೂಚಿಸಿದರು.
ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮ ತಲುಪಿಸುವುದು, ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು, ನಾಗರಿಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ವಸತಿ ಯೋಜನೆ, ಅಲ್ಪಸಂಖ್ಯಾತರ ಜೀವನಮಟ್ಟ ಸುಧಾರಿಸಲು ವಸತಿ ಯೋಜನೆ ಕಲ್ಪಿಸುವುದು. ಹೀಗೆ ಹಲವು ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಮಾಹಿತಿ ನೀಡಿ, 197 ಅಂಗನವಾಡಿ ಕೇಂದ್ರಗಳಿದ್ದು, ಇಲಾಖೆಯಿಂದ ಪೂರಕ ಪೌಷ್ಠಿಕ ಆಹಾರ ಕಲ್ಪಿಸುವುದು, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಪ್ರಧಾನಮಂತ್ರಿ ಅವರ ಮಾತೃವಂದನಾ ಯೋಜನೆ ತಲುಪಿಸುವುದು ಸೇರಿ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಸಿದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾಹಿತಿ ನೀಡಿ, ಶಾಲೆಗಳಲ್ಲಿ ಸಮವಸ್ತ್ರ, ಉಚಿತ ಪಠ್ಯಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯಿಂದ ಅಲ್ಪಸಂಖ್ಯಾತರಿಗೆ 2024 ಮತ್ತು 2025ನೇ ಸಾಲಿನಲ್ಲಿ ಶೇ.100 ಗುರಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ನಗರಾವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕಿ ಅಂಬಿಕಾ ಮಾತನಾಡಿ, ಸ್ಥಳಿಯ ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡಲಾಗಿದೆ. ಶಸ್ತ್ರ ಚಿಕಿತ್ಸೆಗೆ ಸಹಾಯಧನ, ವೈದ್ಯಕಿಯ ಧನ, ಲಘು ವಾಹನ ಚಾಲನಾ ತರಬೇತಿ, ಇತರೆ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಸಮಿತಿಯ ಸದಸ್ಯರಾದ ಶಫೀಕ್ ಅಹಮ್ಮದ್, ಇನಾಯತ್ವುಲ್ಲಾ ಷರೀಫ್, ಇಂದಿರಾಮತಿ, ಶಬೀರ್ ಅಹ್ಮದ್, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಮೈಲಾರಪ್ಪ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕ ರವಿಚಂದ್ರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಜೋಶಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಶ್ರೀನಿವಾಸ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಶೈಕ್ಷಣಿಕ ನೆರವಿಗೆ ಒತ್ತು
ಶ್ರಮಶಕ್ತಿ, ಸ್ವಾವಲಂಭಿ ಸಾರಥಿ, ವೃತ್ತ ಪ್ರೋತ್ಸಾಹ, ಅರಿವು, ವಿದೇಶಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ, ನೇರಸಾಲ ಯೋಜನೆ, ಉನ್ನತ ಶಿಕ್ಷಣಕ್ಕೆ ಸಾಲ ಯೋಜನೆ ಹೀಗೆ ಹಲವು ಯೋಜನೆಗಳನ್ನು ತಲುಪಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ವಿದೇಶಿ ವಿದ್ಯಾಭ್ಯಾಸಕ್ಕಾಗಿ ಕಳುಹಿಸಿಕೊಡಲಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿ ಶಿರಿನ್ ತಾಜ್ ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ 3 ಮುರಾರ್ಜಿ ದೇಸಾಯಿ ವಸತಿ ಶಾಲೆಗಳು, 8 ಮೌಲನಾ ಅಜಾದ್ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಅಭಿವೃದ್ಧಿಗೆ ಸಂಬಂಧಿಸಿದ ದಾಖಲಾತಿಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮ ಅನುಷ್ಠಾನಗೊಳಿಸಿ
ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರವು ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರುತಿದ್ದು, ಅಧಿಕಾರಿಗಳು ಅದನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ನೂತನ ಸಮಿತಿ ರಚಿಸಿದ್ದು, ಅವರೊಂದಿಗೂ ಅಧಿಕಾರಿಗಳು ಸೇರಿ ಯೋಜನೆಗಳ ಮಾಹಿತಿ ಹಂಚಿಕೊಂಡು ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.