

ಮೈಸೂರು: ಲಂಚ ಆರೋಪ ಹೊತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ದಸರಾ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಉಳಿಯಬೇಕು ಎಂದು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಅಧ್ಯಕ್ಷ ಗಿರೀಶ್ ಶಿವಾರ್ಚಕ ಒತ್ತಾಯಿಸಿದ್ದಾರೆ.
ಎಸ್.ಟಿ. ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಹೀಗಾಗಿ ಅವರು ಐತಿಹಾಸಿಕ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸರಿಯಲ್ಲ. ಒಂದು ವೇಳೆ ಪಾಲ್ಗೊಂಡರೆ ವಿವಿಧ ಕನ್ನಡಪರ ಸಂಘಟನೆಗಳ ಜತೆಗೂಡಿ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ವೇದಿಕೆ ಪದಾಧಿಕಾರಿಗಳಾದ ಸಂತೋಷ್, ಯುವರಾಜ್, ರಾಕೇಶ್ ಇತರರಿದ್ದರು.