ಪಿಯು ಪೂರಕ ಪರೀಕ್ಷೆ ಸುಸೂತ್ರವಾಗಿರಲಿ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಸೂಚನೆ, ಪೂರ್ವ ಸಿದ್ದತಾ ಸಭೆ

puc
Published on

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಸೆ.7 ರಿಂದ 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ, ಜಿಲ್ಲೆಯ 2500 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಕರೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.

ಕರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ಮಕ್ಕಳ ಆರೋಗ್ಯ ಸುರಕ್ಷತಾ ದೃಷ್ಟಿಯಿಂದ, ಪರೀಕ್ಷೆ ನಡೆಯಲಿರುವ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳ ಎಲ್ಲ ಕೊಠಡಿ ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣವನ್ನು ಸ್ಯಾನಿಟೈಸ್ ಮಾಡಬೇಕು. ಕರೊನಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದರು.

ದ್ವೀತಿಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯವಾಗಿ ನೀಡಬೇಕು. ಪ್ರತಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್, ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಬಳಿಕ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಹೊರಡಿಸಲಾಗುವುದು. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳ ಪಾಲಕರೂ ಪ್ರವೇಶಿಸುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳನ್ನು ಪ್ರವೇಶಿಸುವಾಗ ಹಾಗೂ ಮರಳಿ ಹೋಗುವಾಗ ಪರಸ್ಪರ ಅಂತರ ಕಾಯ್ದುಕೊಳ್ಳವಂತೆ ನಿಗಾವಹಿಸಬೇಕು, ಅಲ್ಲದೆ ಮೂಲಸೌಕರ್ಯಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ 4 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್‌ನೊದಿಂಗೆ ಪರೀಕ್ಷಾ ಕಾರ್ಯಗಳಿಗೆ ವಾಹನ ಸೌಕರ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net