

ಬೇಲೂರು: ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಸ್ತುಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವುದರಿಂದ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳುವುದರ ಜತೆಗೆ ವೈಜ್ಞಾನಿಕ ಮನೋಭಾವ ಬೆಳೆಸಲು ಆದ್ಯತೆ ನೀಡಿದಂತಾಗುತ್ತದೆ ಎಂದು ಶಿಕ್ಷಣ ಸಂಯೋಜಕ ರವಿಕುಮಾರ್ ಹೇಳಿದರು.
ಪಟ್ಟಣ ಸಮೀಪದ ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೆ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತುಪ್ರದರ್ಶನವನ್ನು ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳಿಗೆ ವಿಜ್ಞಾನದ ಬಗ್ಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕು ಎಂದರು.
ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ಡಿ.ದಿನೇಶ್ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಹೊರಹೊಮ್ಮಲು ಇಂತಹ ಚಟುವಟಿಕೆಗಳು ಸಹಾಯವಾಗುತ್ತವೆ. ವಿದ್ಯಾರ್ಥಿಗಳು ಸ್ವಯಂ ಆಸಕ್ತಿ ಮತ್ತು ಪ್ರಯತ್ನದಿಂದ ಹೊಸ ಹೊಸ ವಿಜ್ಞಾನದ ಪರಿಕರ ಸಿದ್ಧಪಡಿಸಲು ಪ್ರತಿಭೆಯೇ ಕಾರಣ. ಪ್ರತಿ ವರ್ಷದಂತೆ ನಮ್ಮ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಏರ್ಪಡಿಸಿದ್ದೇವೆ. ಆದರೆ ಪಾಲಕರು ಇತರ ಮಕ್ಕಳು ಮಾಡಿರುವ ವಸ್ತುಪ್ರದರ್ಶನ ನೋಡುವುದಲ್ಲದೆ ತಮ್ಮ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ ಎಲ್ಲ ವಿದ್ಯಾರ್ಥಿಗಳಿಗೂ ವೇದಿಕೆ ಕಲ್ಪಿಸಲಾಗುವುದು ಎಂದರು.
ಇಸಿಒ ಮಂಜುನಾಥ್, ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆ ಖಜಾಂಚಿ ಲೋಕೇಶ್, ಪ್ರಾಂಶುಪಾಲ ರಘುರಾಮ್, ಪ್ರೌಢಶಾಲೆ ಮುಖ್ಯಶಿಕ್ಷಕಿ ದೀಪಾ ಇತರರಿದ್ದರು.