

ಮೈಸೂರು: ಬರ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಬರ ಪರಿಸ್ಥಿತಿ ಎದುರಾಗುವ ಮುನ್ಸೂಚನೆ ಇದ್ದರೂ ಸಹ ಯಾವುದೇ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಳ್ಳದೆ ಇದೀಗ ಕೇಂದ ಸರ್ಕಾರವನ್ನು ಟೀಕಿಸುವುದು ಸರಿಯಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೊದಲು ತನ್ನ ಪಾಲಿನ ಬರ ಪರಿಹಾರ ಬಿಡುಗಡೆ ಮಾಡಲಿ, ನಾವು ಕೂಡ ಕೇಂದ್ರದಿಂದ ಅಗತ್ಯ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರಾಜ್ಯದ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ರಾಜ್ಯದ ಜನರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುವುದಿಲ್ಲ, ಕೇಂದ್ರದಿಂದ ಬರಬೇಕಾದ ಶೇ.100 ಪರಿಹಾರ ನೀಡುವುದು ನಿಶ್ಚಿತ, ಇದರಲ್ಲಿ ಯಾವುದೇ ಮುಲಾಜಿಲ್ಲ. ಕೇಂದ್ರದಿಂದ ನೀಡಬೇಕಾಗಿರುವ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ವರದಿ ಸ್ವೀಕಾರಕ್ಕೆ ಕಾಂಗ್ರೆಸ್ ಪಕ್ಷದಲ್ಲೇ ಒಮ್ಮತ ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರದ ಕೆಲವು ಸಚಿವರೇ ವರದಿ ಸ್ವೀಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಸಿದ್ದರಾಮಯ್ಯ ರಾಜಕೀಯ ದುರುದ್ದೇಶದಿಂದ ವರದಿ ಸ್ವೀಕಾರಕ್ಕೆ ಮುಂದಾಗಿದ್ದಾರೆ ಎಂದು ಟೀಕಿಸಿದರು.
ೀಂದ್ರ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ವಿಕಸಿತ್ ಭಾರತ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದರೆ, ಈ ಕಾರ್ಯಕ್ರಮಕ್ಕೆ ಸಹಕಾರ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹಾಗಿದ್ದಲ್ಲಿ ಒಕ್ಕೂಟ ವ್ಯವಸ್ಥೆಯ ಮೇಲೆ ನಿಮಗೆ ನಂಬಿಕೆ ಇಲ್ಲವೇನು? ಜನರಿಗೆ ದೊರೆಯಬೇಕಾದ ಸೌಲಭ್ಯಗಳು ದೊರೆಯದಂತೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.