

ಮದ್ದೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡುವ ಮೂಲಕ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಪಾಲಕರಿಗೆ ಮತ್ತು ಶಿಕ್ಷಕರಿಗೆ ಕೀರ್ತಿ ತರಬೇಕು ಎಂದು ಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹಾಗೂ ದಾನಿಗಳಾದ ಕೆ.ಟಿ.ಜಗದೀಶ್ ತಿಳಿಸಿದರು.
ತಾಲೂಕಿನ ಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಲೇಜಿನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲೇ ಸಂಸ್ಕಾರ, ಸಂಸ್ಕೃತಿ ಹಾಗೂ ಮಾವವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಅಲ್ಲದೆ ಸಮಾಜಕ್ಕೆ ತಮ್ಮದೆಯಾದ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದೇ ವೇಳೆ 50 ಸಾವಿರ ರೂ.ಗಳ ಸ್ವಂತ ಹಣದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವು ಉಚಿತ ನೋಟ್‌ಬುಕ್‌ಗಳನ್ನು ವಿತರಣೆ ಮಾಡಿದರು. 20 ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿ ದಾನಿ ಕೆ.ಟಿ.ಜಗದೀಶ್ ಗಮನ ಸೆಳೆದರು.
ಪ್ರಾಂಶುಪಾಲ ನಂಜುಂಡಸ್ವಾಮಿ ಮಾತನಾಡಿ, ದಾನಿಗಳಾದ ಕೆ.ಟಿ.ಜಗದೀಶ್ ಅವರು ನಮ್ಮ ಶಾಲೆಗೆ ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಸೈಕಲ್ ಸೇರಿದಂತೆ ಹಲವಾರು ರೀತಿಯಲ್ಲಿ ಅನುಕೂಲ ಕಲ್ಪಿಸುತ್ತಿದಾರೆ. ಇಂತಹ ಮಾನವೀಯ ಮೌಲ್ಯವುಳ್ಳ ಹಾಗೂ ಸಮಾಜಕ್ಕೆ ಒಳ್ಳೆಯದನ್ನು ಮಾಡುವ ವ್ಯಕ್ತಿಗಳು ಸಮಾಜದಲ್ಲಿ ಹೆಚ್ಚಾಗಬೇಕು ಎಂದು ತಿಳಿಸಿದರು.
ರೋಟರಿ ಹೈ ಗ್ರೌಂಡ್ಸ್ ಪ್ರಕಾಶ್‌ಕುಮಾರ್, ಎಚ್.ಎಂ.ಟಿ.ಗೌಡ, ಸಮಾಜ ಸೇವಕಿ ನಂದಾ ಜಗದೀಶ್, ಉಪನ್ಯಾಸಕ ಎಚ್.ಎಂ.ಸಿದ್ದರಾಜು, ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ನಿವೃತ್ತ ಆರಕ್ಷಕ ಜಯಸ್ವಾಮಿ ಸೇರಿದಂತೆ ಇತರರು ಇದ್ದರು.