

ಅಂಕೋಲಾ: ಕನ್ನಡ ಭಾಷೆಯಲ್ಲಿ ಕಲಿತ ವಿದ್ಯಾರ್ಥಿಗಳು ಕನ್ನಡದ ಅಭ್ಯುದಯಕ್ಕಾಗಿ ಮುಂದುವರಿಯಬೇಕು ಎಂದು ಕುಮಟಾ ಡಯಟ್ ಉಪ ನಿರ್ದೇಶಕ ಎನ್. ಜಿ. ನಾಯಕ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಪಿಎಂ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ 2023-24 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಿಇಒ ಮಂಗಳಲಕ್ಷ್ಮೀ ಪಾಟೀಲ, ಕಸಾಪ ಜಿಲ್ಲಾ ಗೌರವಾಧ್ಯಕ್ಷ ಜಾರ್ಜ್ ಫರ್ನಾಂಡಿಸ್, ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ಕಸಾಪ ತಾಲೂಕ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಎನ್.ಡಿ. ಅಂಕೋಲೆಕರ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಜಿ. ನಾಯಕ ಹೊಸ್ಕೇರಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಚಂದ್ರ ನಾಯಕ ಮಾತನಾಡಿದರು.
ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಶಾಲು ಹೊದಿಸಿ, ಪಠ್ಯಪುಸ್ತಕಗಳೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಕಸಾಪ ತಾಲೂಕ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ಸ್ವಾಗತಿಸಿದರು. ಪಿಎಂ ಪ್ರೌಢಶಾಲೆಯ ಪ್ರಭಾರಿ ಮುಖ್ಯಾಧ್ಯಾಪಕ ಜಿ.ಆರ್. ತಾಂಡೇಲ, ಕಸಾಪ ಜಿಲ್ಲಾ ಘಟಕದ ಸದಸ್ಯ ಜಯಶೀಲ ಆಗೇರ ನಿರ್ವಹಿಸಿದರು.