

ನರಗುಂದ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಸ್ವಸ್ಥ ಸಮಾಜ ನಿರ್ವಣಕ್ಕೆ ಶ್ರಮಿಸಬೇಕು ಎಂದು ಬಾಬಾಸಾಹೇಬ ಭಾವೆ ಸರ್ಕಾರಿ ತಾಲೂಕಾಸ್ಪತ್ರೆ ಆಪ್ತ ಸಮಾಲೋಚಕ ಎನ್.ಎಲ್. ಮಡಿವಾಳರ ಹೇಳಿದರು.
ಪಟ್ಟಣದ ಮಾರುತಿನಗರ ಬಡಾವಣೆಯ ಶ್ರೀ ಭರಮಪ್ಪ ಜ್ಯೋತೆಣ್ಣವರ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ, ಭರಮಪ್ಪ ಜ್ಯೋತೆಣ್ಣವರ ಪ್ರೌಢ ಶಾಲೆಯ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯ ಝುಡ್.ಎಂ. ಖಾಜಿ ಮಾತನಾಡಿ, ದುಶ್ಚಟಗಳಿಂದ ದೂರವಿರುವ ಸಂಕಲ್ಪ ಮಾಡಿದರೆ ಬದುಕು ಸ್ವಾಸ್ಥ್ಯದಿಂದ ಕೂಡಿರುತ್ತದೆ. ಇಂದಿನ ಯುವಜನತೆ ಒಳ್ಳೆಯ ಹವ್ಯಾಸಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ನಾಗರೀಕರಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ಬಿ. ಅಸೂಟಿ ಮಾತನಾಡಿ, ಯುವಜನತೆ ದೇಶದ ಶಕ್ತಿಯಾಗಿದ್ದು, ಸ್ವಾಸ್ಥ್ಯ ಸಮಾಜ ನಿರ್ವಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಹದಿಹರೆಯದ ವಯಸ್ಸಿನಲ್ಲಿ ದಾರಿ ತಪ್ಪುವ ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಿರಬೇಕು ಎಂದರು. ಕರವೇ ನರಗುಂದ ತಾಲೂಕಾಧ್ಯಕ್ಷ ನಭಿಸಾಬ ಕಿಲ್ಲೇದಾರ ಮಾತನಾಡಿದರು. ಒಕ್ಕೂಟ ಸಭೆಯ ಅಧ್ಯಕ್ಷೆ ಲಕ್ಷ್ಮೀ ಕಮ್ಮಾರ, ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಶಿಕ್ಷಕ, ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.