ದುಡಿಮೆಗೆ ತಕ್ಕ ವೇತನ ಸಿಗಲಿ

18 vikram 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸರ್ಕಾರಿ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ಗುರುತರ ಜವಾಬ್ದಾರಿಯನ್ನು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರಮಾಣಿಕವಾಗಿ ಮಾಡುತ್ತಿದ್ದಾರೆ. ಇವರ ದುಡಿಮೆಗೆ ತಕ್ಕ ವೇತನ ಸಿಗುತ್ತಿಲ್ಲ ಎಂದು ರಾಷ್ಟ್ರೀಯ ಶಿಕ್ಷಕರ ಫೆಡರೇಷನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ವಿಷಾಧ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಧಾರವಾಡ ಜಿಲ್ಲಾ ಸಂಘದ ಕಚೇರಿಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾನ ಕೆಲಸಕ್ಕೆ ಸಮಾನ ವೇತನ ಪಡೆಯುವುದು ಸಂವಿಧಾನ ಬದ್ಧ ಹಕ್ಕಾಗಿದೆ. ಈ ದಿಸೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಉನ್ನತ ವೇತನ ಶ್ರೇಣಿ ಮತ್ತು ಸೌಲಭ್ಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ. ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಿಲ್ಲೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರ ಪ್ರೀತಿಗೆ ಪಾತ್ರರಾಗಿದ್ದು, ಶಾಲಾ ಪೂರ್ವ ಶಿಕ್ಷಣದ ಜತೆಗೆ ಜನರ ಆರೋಗ್ಯದ ಉಸ್ತುವಾರಿಯನ್ನು ಪರಿಣಾಮಕಾರಿಯಾಗಿ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮ ಅನುಷ್ಠಾನಾಧಿಕಾರಿ ಅನುಪಮ ಅಂಗಡಿ, ಸಿಡಿಪಿಒ ಶರಣಬಸಪ್ಪ, ಜಿಲ್ಲಾಧ್ಯಕ್ಷೆ ಎನ್.ಎಫ್. ಸಮುದ್ರಿ ಮಾತನಾಡಿದರು. ವಿ.ಬಿ. ಮತ್ತೂರ, ಎಸ್.ಎಸ್. ಕಣವಿ, ಇತರರು ಇದ್ದರು. ರತ್ನಾ ಶಿರೂರ ಸ್ವಾಗತಿಸಿದರು. ಸವಿತಾ ಅಂಗಡಿ ನಿರೂಪಿಸಿದರು. ಚನ್ನಕ್ಕ ಅಂಗಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net