

ಶಿವಮೊಗ್ಗ: ಪಕ್ಷದ ಪ್ರತಿ ಕಾರ್ಯಕರ್ತನೂ ಪ್ರಧಾನಿ ನರೇಂದ್ರ ಮೋದಿ ಅವರ ರಾಯಭಾರಿಯಾಗಿ ಪ್ರತಿ ಮನೆಗೂ ತೆರಳಿ ಕಳೆದ 11 ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ಮಾಡಬೇಕು. ಅರ್ಹರಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ವಿಭಾಗದ ಪ್ರಮುಖರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರು ಪಕ್ಷ ಸಂಘಟನೆಯ ಜತೆಗೆ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಘೋಷಣೆ ಮತ್ತಿತರ ಕಾರಣಗಳಿಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಆದರೆ ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಎನ್‌ಡಿಎ ಅಧಿಕಾರಕ್ಕೆ ಬಂದಿರುವುದು ಸಕಾರಾತ್ಮಕ ಕಾರಣಗಳಿಗೆ ಹಾಗೂ ನರೇಂದ್ರ ಮೋದಿ ಆಡಳಿತದಲ್ಲಿ ಜನರು ಇರಿಸಿರುವ ನಂಬಿಕೆಯ ಕಾರಣಕ್ಕೆ ಎಂದು ತಿಳಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಶಾಂತಾರಾಮ ಸಿದ್ದಿ, ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಶಿವಾನಂದ ನಾಯ್ಕ, ಮಾಜಿ ಶಾಸಕರಾದ ರೂಪಾಲಿ ನಾಯ್ಕ, ಕೆ.ಬಿ.ಅಶೋಕ ನಾಯ್ಕ, ಕೆ.ಜಿ.ಕುಮಾರಸ್ವಾಮಿ, ಬಿ.ಸ್ವಾಮಿರಾವ್, ಡಿ.ಎಸ್.ಸುರೇಶ್, ಸುನೀಲ್ ನಾಯ್ಕ, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಇತರರಿದ್ದರು.