

ಮದ್ದೂರು: ಭಕ್ತಿ ತತ್ವದ ಮೂಲಕ ಸಮಾನತೆ ಸಾರವನ್ನು ಪ್ರಚಾರ ಮಾಡಿದ ಮೇರು ವ್ಯಕ್ತಿ ಕನಕದಾಸರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಭಕ್ತ ಕನಕದಾಸರ ಜಯಂತ್ಯುತ್ಸವದಲ್ಲಿ ಮಾತನಾಡಿದರು. ಸಾಮಾಜಿಕ ಚಿಂತನೆಗಳ ಹಾದಿಯಲ್ಲಿ ಕನಕದಾಸರು ಶ್ರಮಿಸಿದ್ದು, ಅವರ ತತ್ವಾದರ್ಶಗಳನ್ನು ಇಂದಿನ ಯುವ ಜನಾಂಗ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದರು.
ತಾಲೂಕು ಕುರುಬರ ಸಂಘದ ಅಧ್ಯಕ್ಷ ಅಶ್ವಿನ್‌ರಾಮಕೃಷ್ಣೇಗೌಡ ಮಾತನಾಡಿ, ಕನಕದಾಸರು ಕೀರ್ತನೆಗಳ ಮೂಲಕ ಸಮಾಜದ ಸ್ವಾಸ್ಥ್ಯತೆಯನ್ನು ಕಾಪಾಡಿದ್ದು, ನೀತಿಬೋಧನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಜತೆಗೆ ಸಮಾನತೆಯನ್ನು ಎತ್ತಿ ಹಿಡಿದ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲ ಆವರಣದಿಂದ ವಿವಿಧ ಜಾನಪದ ಕಲಾಪ್ರಕಾರಗಳೊಂದಿಗೆ ಕನಕದಾಸರ ಭಾವಚಿತ್ರವನ್ನು ತೆರೆದವಾಹನದಲ್ಲಿಟ್ಟು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ನಂತರ ತಾಪಂ ಕಚೇರಿಗೆ ಆಗಮಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧನೆ ಮಾಡಿದ ವ್ಯಕ್ತಿಗಳು ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉಪನ್ಯಾಸಕಿ ಪವಿತ್ರಾ ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವೀಶ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಅಶ್ವಿನ್‌ರಾಮಕೃಷ್ಣೇಗೌಡ, ಉಪಾಧ್ಯಕ್ಷ ಪ್ರಪುಲ್ ಚಂದ್, ಕಾರ್ಯದರ್ಶಿ ಎಚ್.ರಾಜು, ಜಿಲ್ಲಾ ಸಂಘದ ನಿರ್ದೇಶಕರಾದ ಪೂಜಾರಿ ಮಹೇಶ್, ಬೀರೇಶ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂಕರಕ್ಷಣಾ ಕಾರ್ಯಪಡೆ ಸಮಿತಿ ಮಾಜಿ ನಿರ್ದೇಶಕ ರಾಮಕೃಷ್ಣೇಗೌಡ, ಜಿಪಂ ಮಾಜಿ ಸದಸ್ಯರಾದ ರವಿಕಉಮಾರ್, ಜವಾಹರ್‌ಲಾಲ್, ಮರಿಹೆಗ್ಗಡೆ, ಪದಾಧಿಕಾರಿಗಳಾದ ಜವರಾಯಿಗೌಡ ಸೇರಿದಂತೆ ಇತರರು ಇದ್ದರು.